ಸಚಿವ ಅನಂತಕುಮಾರ್ ಹೆಗಡೆ ರಾಜೀನಾಮೆಗೆ ಆಗ್ರಹ

7

ಸಚಿವ ಅನಂತಕುಮಾರ್ ಹೆಗಡೆ ರಾಜೀನಾಮೆಗೆ ಆಗ್ರಹ

Published:
Updated:

ಚಿಕ್ಕಮಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಸಚಿವ ಅನಂತಕುಮಾರ್ ಹೆಗಡೆ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

‘ಅನಂತಕುಮಾರ್ ಹೆಗಡೆಗೆ ಸಂವಿಧಾನದ ತಿಳಿವಳಿಕೆ ಕೊರತೆ ಇದೆ. ಆದ್ದರಿಂದಲೇ ಅವರು ಸಂವಿಧಾನ ಮತ್ತು ತಳ ಸಮುದಾಯದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು, ಗಡಿಪಾರು ಮಾಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಹೂವಪ್ಪ ಮಾತನಾಡಿ, ‘ಅನಂತ್‌ಕುಮಾರ್ ಹೆಗಡೆ ಅವರು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ, ಲೋಕಸಭೆಯಲ್ಲಿ ಕ್ಷಮೆ ಯಾಚಿಸಿದ್ದರು. ಅವರು ತಪ್ಪನ್ನು ತಿದ್ದಿಕೊಳ್ಳದೆ ದಲಿತರು, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ವಿರುದ್ಧ ಮತ್ತೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೂರಿದರು.

ಸಂವಿಧಾನದ ಚೌಕಟ್ಟಿನಲ್ಲಿ ಸಚಿವನಾಗಿರುವ ಅವರು ದೇಶದ ಅಭಿವೃದ್ಧಿ ಬಗ್ಗೆ ಚಿಂತಿಸಬೇಕು. ಗಂಭೀರವಾಗಿ ಆಲೋಚಿಸಿ ಮಾತನಾಡಬೇಕು’ ಎಂದು ಆರೋಪಿಸಿದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ‘ಸಚಿವ ಅನಂತಕುಮಾರ್ ಹೆಗಡೆ ಅವರು ದಲಿತ ವಿರೋಧಿ ಹೇಳಿಕೆ ನೀಡಿರುವುದನ್ನು ಬಿಜೆಪಿಯಲ್ಲಿನ ದಲಿತ ನಾಯಕರು ಪ್ರಶ್ನಿಸಬೇಕು. ಅವರ ದರ್ವತರ್ನೆಗೆ ಕಡಿವಾಣ ಹಾಕಬೇಕು’ ಎಂದರು.

‘ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಅನಂತಕುಮಾರ್ ಹೆಗಡೆ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿದ್ದರಿಂದ ಕರ್ನಾಟಕದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎನ್ನುವ ಆಶಾಭಾವನೆ ಇತ್ತು. ಆದರೆ ಅವರು ರಾಜ್ಯದ ಪ್ರಗತಿ ಬಗ್ಗೆ ಚಿಂತಿಸಿಲ್ಲ. ಅವರ ಭಾಷಣಗಳ ಮೂಲಕ ವಿವಾದಗಳ ಸರಮಾಲೆ ಸೃಷ್ಟಿಸಿದ್ದಾರೆ’ ಎಂದು ದೂಷಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಮುಖಂಡರಾದ ಎಂ.ಸಿ.ಶಿವಾನಂದಸ್ವಾಮಿ, ಹಿರೇಮಗಳೂರು ಪುಟ್ಟಸ್ವಾಮಿ, ರಾಮಮಚಂದ್ರ, ಅಕ್ಮಲ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry