‘ನುಡಿದಂತೆ ನಡೆದ ಸರ್ಕಾರ’

7

‘ನುಡಿದಂತೆ ನಡೆದ ಸರ್ಕಾರ’

Published:
Updated:

ಧಾರವಾಡ: ‘ವ್ಯಕ್ತಿಗತ ಮತ್ತು ಸಮುದಾಯದ ಹಿತ ಸಾಧನೆಯ ಉದ್ದೇಶದಿಂದ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ಸರ್ಕಾರವು ನುಡಿದಂತೆ ನಡೆದು, ರಾಜ್ಯ ಅಭಿವೃದ್ಧಿಗೆ ಕಾರಣವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ಗಣರಾಜ್ಯೋತ್ಸವ ಅಂಗವಾಗಿ ಇಲ್ಲಿನ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್‌ ಸರ್ಕಾರವು ಕೊಟ್ಟ ಮಾತಿನಂತೆ ಸ್ವಚ್ಛ, ಶುದ್ಧ ಹಾಗೂ ದಕ್ಷ ಆಡಳಿತ ನೀಡಿದೆ. ಅನ್ನಭಾಗ್ಯ ಯೋಜನೆಯಡಿ ನಾಲ್ಕೂವರೆ ವರ್ಷಗಳಲ್ಲಿ ಜಿಲ್ಲೆಯ 3.20 ಲಕ್ಷ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ₹ 39.67 ಕೋಟಿ ವೆಚ್ಚದಲ್ಲಿ ಉಚಿತ ಅಕ್ಕಿ ಹಾಗೂ ರಿಯಾಯ್ತಿ ದರದಲ್ಲಿ ಆಹಾರಧಾನ್ಯ ಪೂರೈಸಲಾಗಿದೆ’ ಎಂದರು.

‘ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಯಾಲಜಿಕಲ್ ಆರ್ಟ್ ಗ್ಯಾಲರಿ ನಿರ್ಮಿಸಲು ₹3.25 ಕೋಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಾಲೊನಿಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು 299 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ’ ಎಂದು ಹೇಳಿದರು.

‘ಧಾರವಾಡ ಜಿಲ್ಲಾ ಆಸ್ಪತ್ರೆ, ಕುಂದಗೋಳ, ಕಲಘಟಗಿ ಮತ್ತು ನವಲಗುಂದ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ, ಸ್ಕ್ಯಾನಿಂಗ್ ಯಂತ್ರಗಳು ಮತ್ತು ಜೆನೆರಿಕ್ ಔಷಧ ಮಳಿಗೆ ಸ್ಥಾಪಿಸಲಾಗಿದೆ’ ಎಂದು ಸಚಿವರು ತಿಳಿಸಿದರು.

‘2016–17 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 91,638 ರೈತ ಫಲಾನುಭವಿಗಳಿಗೆ ₹ 75.02 ಕೋಟಿ,  ಹಿಂಗಾರು ಹಂಗಾಮಿನಲ್ಲಿ 84,541 ರೈತರಿಗೆ ₹ 74.42 ಕೋಟಿ ಪರಿಹಾರವನ್ನು ಆರ್‌ಟಿಜಿಎಸ್ ಮೂಲಕ ಪಾವತಿಸಲಾಗಿದೆ’ ಎಂದು ಹೇಳಿದರು.

‘ಅಕ್ರಮ -ಸಕ್ರಮ ಯೋಜನೆಯಡಿ ಜಿಲ್ಲೆಯಲ್ಲಿ 15,484 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 10,762 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಅವಳಿ ನಗರದಲ್ಲಿ 37 ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ₹ 1,662 ಕೋಟಿ ವೆಚ್ಚ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಲಾ ಶೇ 50 ರಷ್ಟು ಅನುದಾನ ನೀಡಲಿವೆ’ ಎಂದರು.

ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯ್ತಿ ಸಿಇಒ ಆರ್. ಸ್ನೇಹಲ್, ಹೆಚ್ಚುವರಿ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಪೊಲೀಸ್ ಕಮಿಷನರ್, ಎಂ.ಎನ್.ನಾಗರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಜಿ., ಜಿಲ್ಲಾ ಪಂಚಾಯ್ತಿ ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರ, ಉಪಾಧ್ಯಕ್ಷ ಶಿವಾನಂದ ಕರಿಗಾರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry