ಬಯಲು ಶೌಚಮುಕ್ತ ಜಿಲ್ಲೆಗೆ ಸಂಕಲ್ಪ

7

ಬಯಲು ಶೌಚಮುಕ್ತ ಜಿಲ್ಲೆಗೆ ಸಂಕಲ್ಪ

Published:
Updated:
ಬಯಲು ಶೌಚಮುಕ್ತ ಜಿಲ್ಲೆಗೆ ಸಂಕಲ್ಪ

ಚಾಮರಾಜನಗರ: ‘ಮಾರ್ಚ್‌ ಅಂತ್ಯಕ್ಕೆ ಚಾಮರಾಜನಗರ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್‌ ಕುಮಾರ್‌ ಹೇಳಿದರು.

ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿಯಿಂದ ಸ್ವಚ್ಛ ಭಾರತ ಮಿಷನ್‌ ಅಡಿ ನಡೆದ ಶೌಚಾಲಯ ಬಳಕೆ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣ ಮತ್ತು ಬಳಕೆ ಮಾಡುವ ಸಂಬಂಧ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಶೇ 85 ರಿಂದ 90ರಷ್ಟು ಶೌಚಾಲಯ ನಿರ್ಮಾಣವಾಗಿದೆ. 100 ದಿನಗಳೊಳಗೆ ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚ ಮುಕ್ತವಾಗಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೌಚಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸುವಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜವಾಬ್ದಾರಿ ಹೆಚ್ಚಿದೆ ಎಂದು ತಿಳಿಸಿದರು.

ಕಳೆದೆರಡು ವರ್ಷದಿಂದ ಜಿಲ್ಲೆಯಲ್ಲಿ ಬರಗಾಲ ಆವರಿಸಿ ನೀರಿನ ಸಮಸ್ಯೆ ತಲೆದೋರಿತ್ತು. ಈ ಹಿನ್ನೆಲೆಯಲ್ಲಿ ಶೌಚಾಲಯ ನಿರ್ಮಾಣ ಮತ್ತು ಬಳಕೆಯ ಯೋಜನೆಗೆ ಹಿನ್ನಡೆಯುಂಟಾಗಿತ್ತು. ಪ್ರಸ್ತಕ ವರ್ಷ ಉತ್ತಮ ಮಳೆಯಾಗಿದೆ. ಜತೆಗೆ, ಬಹುಗ್ರಾಮ ಕುಡಿಯುವ ನೀರು ಯೋಜನೆಯಿಂದ ನೀರಿನ ಸಮಸ್ಯೆ ಬಗೆಹರಿದಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್‌. ಬಾಲರಾಜು ಮಾತನಾಡಿ, ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡುವ ಜತೆಗೆ ಗ್ರಾಮದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಗಿಡ, ಮರಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಗ್ರಾಮದಲ್ಲಿ 1,605 ಕುಟುಂಬಗಳು ಇವೆ. ಈ ಪೈಕಿ 1,428 ಕುಟುಂಬಗಳು ಶೌಚಾಲಯ ನಿರ್ಮಿಸಿಕೊಂಡಿವೆ. ಉಳಿದ 177 ಕುಟುಂಬಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಅಗತ್ಯ ಜಾಗವಿಲ್ಲ. ಈ ಸಂಬಂಧ ಜಿಲ್ಲಾ ಪಂಚಾಯಿತಿಯಿಂದ ಸಮುದಾಯ ಶೌಚಾಲಯ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು ಅವರು ಗ್ರಾಮಸ್ಥರಿಗೆ ಶೌಚಾಲಯ ಬಳಕೆ ಹಾಗೂ ಪರಿಸರ ಸ್ವಚ್ಛತೆ ಕಾಪಾಡುವಂತೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಕಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್‌, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಿಪತಿ ಸೇರಿದಂತೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮಸ್ಥರು, ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.

‘ಎಲ್ಲರೂ ಶೌಚಾಲಯ ಬಳಸಿ’

‘ಪರಿಸರ ಸ್ವಚ್ಛವಾಗಿಡಲು ಎಲ್ಲರೂ ಶೌಚಾಲಯ ಬಳಸಬೇಕು’ ಎಂದು ಮಂಗಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುಚಿತ್ರಾ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂಬ ನೀತಿ ಜಾರಿಯಾದ ಬಳಿಕ ವ್ಯಾಪಕ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಶೌಚಾಲಯ ಬಳಕೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

‘ನಮ್ಮ ಮನೆಯಲ್ಲಿ ಶೌಚಾಲಯವಿದೆ. ನಾವು ಪ್ರತಿನಿತ್ಯ ಶೌಚಾಲಯ ಬಳಸುತ್ತೇವೆ. ನನ್ನ ಸ್ನೇಹಿತರ ಮನೆಯಲ್ಲೂ ಶೌಚಾಲಯವಿದೆ. ಆದರೆ, ನಮ್ಮ ಶಾಲೆಯ ಇಬ್ಬರು ವಿದ್ಯಾರ್ಥಿಗಳ ಮನೆಯಲ್ಲಿ ಜಾಗದ ಸಮಸ್ಯೆಯಿಂದ ಶೌಚಾಲಯ ನಿರ್ಮಿಸಿಲ್ಲ. ಸರ್ಕಾರದಿಂದ ಸಮುದಾಯ ಶೌಚಾಲಯ ನಿರ್ಮಿಸುವ ಮೂಲಕ ಜಾಗವಿಲ್ಲದವರಿಗೂ ಶೌಚಾಲಯ ಸೌಲಭ್ಯ ಒದಗಿಸಬೇಕು’ ಎಂದು ಮನವಿ ಮಾಡಿದರು.

* * 

ಶೌಚಾಲಯವಿದ್ದೂ ಬಳಕೆ ಮಾಡದೆ ಬಯಲನ್ನು ಆಶ್ರಹಿಸುವವರು ಮುಂದಿನ ದಿನಗಳಲ್ಲಿ ಎಚ್ಚೆತ್ತುಕೊಳ್ಳಬೇಕು. ತಪ್ಪಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ

ಡಾ.ಕೆ. ಹರೀಶ್‌ಕುಮಾರ್

ಜಿ.ಪಂ. ಸಿಇಒ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry