ಜಿಲ್ಲೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯಗೆ ಆಹ್ವಾನ

7

ಜಿಲ್ಲೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯಗೆ ಆಹ್ವಾನ

Published:
Updated:

ಗುಳೇದಗುಡ್ಡ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಯಾವುದಾದರು ಒಂದು ಮತಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದು ಜಿಲ್ಲೆಯ ಶಾಸಕರು ಕೇಳಿಕೊಂಡಿದ್ದಾರೆ. ಆದರೆ ಬಾದಾಮಿ ಮತಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಹೇಳಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ಗುಳೇದಗುಡ್ಡ ಪ್ರವಾಸಿ ಮಂದಿರದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾನುವಾರ ಸಂಜೆ ಭಾಗವಹಿಸಿದ ನಂತರ ‘ಪ್ರಜಾವಾಣಿ’ ಪ್ರತಿನಿಧಿಯೊಂದಿಗೆ ಮಾತನಾಡಿದರು.

‘ಮುಖ್ಯಮಂತ್ರಿ ಜಿಲ್ಲೆಗೆ ಬಂದು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಸ್ಪರ್ಧಿಸುವುದು ಇಲ್ಲ ಎಂದು ಯಾವುದೇ ಸ್ಪಷ್ಟ ಅಭಿಪ್ರಾಯ ಹೇಳಿಲ್ಲ. ಮುಖ್ಯಮಂತ್ರಿ ಜಿಲ್ಲೆಯ ಯಾವು ದಾದರೂ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ವಾತಾವರಣ ಹೆಚ್ಚಿದೆ ಎಂದು ಶಾಸಕರು ಮಾಡಿರುವ ಮನವಿಯನ್ನು ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದು ಹೇಳಿದರು.

ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಪ್ರದೇಶ ಕಾಂಗ್ರೆಸ್ ಸಮಿತಿ ಕೆಲವು ಮಾನದಂಡನೆಗಳನ್ನು ಹಾಕಿಕೊಂಡಿದೆ. ಪ್ರತಿ ಮತಕ್ಷೇತ್ರಕ್ಕೆ ವೀಕ್ಷಕರು ಭೇಟಿ ನೀಡುತ್ತಾರೆ.

ಅವರು ಪಕ್ಷದ ಮುಖಂಡರ, ಕಾರ್ಯಕರ್ತರ ಹಾಗೂ ಜನರ ಅಭಿಪ್ರಾಯ ಸಂಗ್ರಹಿಸುತ್ತಾರೆ. ವೀಕ್ಷಕರ ಸಮೀಕ್ಷೆಯ ಆಧಾರದ ಮೇಲೆ ಈ ಬಾರಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಮತಕ್ಷೇತ್ರದಲ್ಲಿ ಕೆಲಸ ಮಾಡದ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಮೀರ್ ಮೌಲ್ವಿ, ಚಿದಾಂದಸಾ ಕಾಟವಾ, ವೈ.ಆರ್. ಹೆಬ್ಬಳ್ಳಿ, ರಾಮಣ್ಣ ಹಾದಿಮನಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry