ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಹೆಚ್ಚಿದ ಕೊಲೆ, ಅತ್ಯಾಚಾರ: ಪ್ರತಿಭಟನೆ

Last Updated 3 ಫೆಬ್ರುವರಿ 2018, 5:25 IST
ಅಕ್ಷರ ಗಾತ್ರ

ಯಾದಗಿರಿ: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಹತ್ಯೆ ಮತ್ತು ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಯಲು ಸರ್ಕಾರ ವಿಫಲವಾಗಿದ್ದು ಸಿ.ಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ನಗರದ ಸುಭಾಷಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅತ್ಯಾಚಾರ, ಕೊಲೆ ಪ್ರಕರಣಗಳ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಸಂತೋಷ್ ಹಾಗೂ ಭಾಲ್ಕಿ ತಾಲ್ಲೂಕಿನ ಕೋಸಂ ಗ್ರಾಮದ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಯಾದಗಿರಿ ನಗರದಲ್ಲಿ ಭೀಮು ತಳವಾರ ಯುವಕನ ಕೊಲೆ ನಡೆದಿದೆ. ರಾಜ್ಯದಾದ್ಯಂತ ಕೊಲೆ, ಅತ್ಯಾಚಾರ ಮತ್ತಿತರ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರಿಗೆ ಮುಕ್ತ ಅವಕಾಶ ನೀಡದ ಸರ್ಕಾರ, ದುಷ್ಕರ್ಮಿಗಳನ್ನು ರಕ್ಷಣೆ ಮಾಡುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತೆಲಂಗಾಣ ರಾಜ್ಯ ಉಪಾಧ್ಯಕ್ಷ ನಾಗರಾವ ನಾಮೋಜಿ ಮಾತನಾಡಿ,‘ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮೊದಲ ರಾಜ್ಯ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಇದೀಗ ಅತ್ಯಾಚಾರ, ಕೊಲೆಗಳಲ್ಲೂ ಪ್ರಥಮ ಸ್ಥಾನ ಪಡೆಯಲು ಹೊರಟಿದೆ ಎಂದು ಕಿಡಿ ಕಾರಿದರು.

‘ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆಗಳಿಗೆ ಕುಮ್ಮಕ್ಕು ನೀಡಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಹವಣಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ’ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಮಾತನಾಡಿ,‘ರಾಜ್ಯದಲ್ಲಿ ಆಡಳಿತ ನಡೆಸಲು ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ ಎಲ್ಲೆಮೀರಿದೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಲ್ಲಿಯವರೆಗೂ ರಾಝ್ಯದಲ್ಲಿ 20ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆಯಾಗಿದೆ. ಇದಕ್ಕೆ ಕಾಂಗ್ರೆಸ್ ಮುಖಂಡರುಗಳೇ ಕಾರಣರಾಗಿದ್ದಾರೆ’ ಎಂದು ಆಪಾದಿಸಿದರು.

ಬಿಜೆಪಿ ಮುಖಂಡರಾದ ಡಾ.ವೀರಬಸವಂತರೆಡ್ಡಿ ಮುದ್ನಾಳ, ಡಾ.ಶರಣಭೂಪಾಲರೆಡ್ಡಿ ನಾಯ್ಕಲ್, ಡಾ.ಭೀಮಣ್ಣ ಮೇಟಿ, ಅಯ್ಯಣ್ಣ ಮಾಸ್ಟರ್, ಸುರೇಶ ರಾಠೋಡ, ವೀಣಾ ಮೋದಿ, ಸುನೀತಾ ಚವ್ಹಾಣ, ಅಕ್ಕಾಮಹಾದೇವಿ, ತಿಪ್ಪಣ್ಣ ಕೊನಿಮನಿ, ಸಾಬು ಮಡಿವಾಳ, ಗೋಪಾಲ ದಾಸನಕೇರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

* * 

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದ್ದರೂ, ಗೃಹಮಂತ್ರಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಲಷ್ಟೇ ಸೀಮಿತ ಮತ್ತು ಶಕ್ತರಾಗಿದ್ದಾರೆ.
ಡಾ.ಶರಣಭೂಪಾಲರಡ್ಡಿ  ನಾಯ್ಕಲ್
ಬಿಜೆಪಿ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT