ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿಗೆ ನೈತಿಕತೆ ಇಲ್ಲ’

Last Updated 8 ಫೆಬ್ರುವರಿ 2018, 8:54 IST
ಅಕ್ಷರ ಗಾತ್ರ

ಕೂಡ್ಲಿಗಿ: ‘ ಭಯೋತ್ಪಾದಕ ಅಫ್ಜಲ್ ಗುರುನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಒಪ್ಪಿಕೊಂಡಿದ್ದ ಪಿಡಿಪಿಯೊಂದಿಗೆ ಕೈ ಜೋಡಿಸಿದ ಬಿಜೆಪಿ ಪಕ್ಷವು ಕಾಂಗ್ರೆಸ್‌ನ ದೇಶ ಭಕ್ತಿ ಪ್ರಶ್ನಿಸುವ ನೈತಿಕತೆ ಉಳಿಸಿಕೊಂಡಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ಚಿತ್ರ ಮಂದಿರದಲ್ಲಿ ಏರ್ಪಡಿಸಿದ್ದ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ₹ 73 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ಆದರೆ, ಕಳೆದ 4 ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರು ಸಾಲಮನ್ನಾಕ್ಕೆ ಮುಂದಾಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ₹ 8,500 ಕೋಟಿಯಷ್ಟು ರೈತರ ಸಾಲಮನ್ನಾ ಮಾಡಿದೆ. ಆದರೆ ರಾಜ್ಯ ಬಿಜೆಪಿ ನಾಯಕರು ಸಾಲಮನ್ನಾದ ಬಗ್ಗೆ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪ ಮಾಡುತ್ತಿಲ್ಲ’ ಎಂದು ದೂರಿದರು.

‘ ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಶೇ 90ರವರೆಗೆ ಸಹಾಯಧನದೊಂದಿಗೆ ಕೃಷಿ ವಲಯದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು, 80 ಸಾವಿರ ರೈತರು ಇದರ ಪ್ರಯೋಜನ ಪಡೆದಿದ್ದಾರೆ. ಹಾಲು ಉತ್ಪಾದಕರಿಗೂ ಹೆಚ್ಚಿನ ಪ್ರೋತ್ಸಾಹ ನೀಡಿದ್ದರಿಂದ ಹಾಲು ಉತ್ಪಾದನೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ’ ಎಂದರು. ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿರಾಜ್ ಶೇಖ್‌ ಮಾತನಾಡಿದರು.

ಇದಕ್ಕೂ ಮೊದಲು ಪಟ್ಟಣದಲ್ಲಿ ಕಾರ್ಯಕರ್ತರೊಂದಿಗೆ ಸಚಿವ ಸಂತೋಷ್ ಲಾಡ್ ಬೈಕ್ ರ‍್ಯಾಲಿ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುನಾಥ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಳಿಗಿ ವೀರೇಂದ್ರ ,ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಆಶಾಲತಾ, ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಎನ್. ಪದ್ಮಾ, ಡಿಸಿಸಿ ಕಾರ್ಯದರ್ಶಿಗಳಾದ ಜಿ. ನಾಗಮಣಿ, ಉದಯ ಜನ್ನು, ರಾಬಕೋ ಅಧ್ಯಕ್ಷ ಎಂ. ಗುರುಸಿದ್ದನಗೌಡ, ಎಸ್ಟಿ ಘಟಕದ ಅಧ್ಯಕ್ಷ ಸಿ.ಬಿ. ಜಯರಾಂ ನಾಯಕ, ಎಪಿಎಂಸಿ ಉಪಾಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್. ವೀರಭದ್ರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT