ಚುನಾವಣೆ ಪ್ರಕ್ರಿಯೆಯಲ್ಲಿ ಶಿಸ್ತಿನಿಂದ ಕಾರ್ಯನಿರ್ವಹಿಸಿ

7

ಚುನಾವಣೆ ಪ್ರಕ್ರಿಯೆಯಲ್ಲಿ ಶಿಸ್ತಿನಿಂದ ಕಾರ್ಯನಿರ್ವಹಿಸಿ

Published:
Updated:
ಚುನಾವಣೆ ಪ್ರಕ್ರಿಯೆಯಲ್ಲಿ ಶಿಸ್ತಿನಿಂದ ಕಾರ್ಯನಿರ್ವಹಿಸಿ

ಚಿತ್ರದುರ್ಗ: ಚುನಾವಣೆ ಪ್ರಕ್ರಿಯಲ್ಲಿ ಸೆಕ್ಟರ್ ಮತ್ತು ನೋಡಲ್ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದ್ದು, ಈ ಅಧಿಕಾರಿಗಳು ಜವಾಬ್ದಾರಿಯಿಂದ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳಿಗಾಗಿ ಚುನಾವಣೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‌ಸೆಕ್ಟರ್ ಅಧಿಕಾರಿಗಳಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದೆ. ತಾವು ನಿಯೋಜನೆಗೊಂಡಿರುವ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ

ಗಳಿಗೆ ಭೇಟಿ ನೀಡಿ ಚುನಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಬೇಕು. ಚುನಾವಣೆಯಲ್ಲಿ ಯಾವುದೇ ರೀತಿ ಲೋಪವಾಗದಂತೆ ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪ್ರತಿ ಗ್ರಾಮ, ನಗರ, ಪಟ್ಟಣ, ಪ್ರದೇಶಗಳಲ್ಲಿ ಮತದಾನದ ಮಹತ್ವದ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವಂತೆ ಜಾಗೃತಿ ಮೂಡಿಸಬೇಕು. ಮತದಾರರು ಆಮಿಷಕ್ಕೆ ಈಡಾಗದಂತೆ ಹಾಗೂ ಚುನಾವಣೆಯಲ್ಲಿ ನಿರ್ಭಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸುವ ಜವಾಬ್ದಾರಿ ಸೆಕ್ಟರ್ ಅಧಿಕಾರಿಗಳದ್ದು ಎಂದು ಹೇಳಿದರು.

ಆಯಾ, ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಹಾಗೂ ಇತರೆ ಸೌಕರ್ಯಗಳ ಬಗ್ಗೆ ಪರಿಶೀಲಿಸಬೇಕು. ಸಮಸ್ಯೆ ಕಂಡುಬಂದರೆ, ತಕ್ಷಣ ಚುನಾವಣಾಧಿಕಾರಿ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ಮುಂದಿನ ತರಬೇತಿ ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ, ಗೊಂದಲಗಳಿದ್ದರೆ ಮೇಲಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಬೇಕು. ಒಮ್ಮೆ ಚುನಾವಣಾ ವೆಬ್‌ಸೈಟ್‌ ಅವಲೋಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.

‘ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎನ್.ರವಿಂದ್ರ, ‘ ಚುನಾವಣೆ ಘೋಷಣೆಯಾದ ದಿನದಿಂದ ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳ ಬಗ್ಗೆ ಗಮನಹರಿಸಬೇಕು. ಮತದಾರರಿಗೆ ಮತಚಲಾಯಿಸಲು ಬೇಕಾದ ಪೂರಕ ವಾತಾವರಣವನ್ನು ನಿರ್ಮಿಸಬೇಕು. ವೃದ್ಧರು ಮತ್ತು ಅಂಗವಿಕಲರು ಮತಗಟ್ಟೆಗೆ ಬರುವಂತಹ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಈ ಬಾರಿ ಹೊಸದಾಗಿ ವಿವಿಪ್ಯಾಟ್ ಯಂತ್ರ ಅಳವಡಿಸಲಾಗುತ್ತಿದೆ. ಈ ಯಂತ್ರದ ಮೂಲಕ ಮತದಾರರು ತಾವು ಯಾರಿಗೆ ಮತದಾನ ಮಾಡಿದ್ದೇವೆ ಎಂದು ನೋಡಬಹದು. ಸುಮಾರು 7 ಸೆಕೆಂಡ್‌ವರೆಗೆ ಯಾರಿಗೆ ಮತದಾನ ಮಾಡಲಾಗಿದೆ ಎಂಬುದನ್ನು ತಿಳಿಯಲು ಸಾಧ್ಯವಿದೆ. ಈ ಮೂಲಕ ಮತ ಚಲಾವಣೆಯಾದ ಬಗ್ಗೆ ಖಾತರಿ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ಚುನಾವಣೆ ನೋಡಲ್ ಎಂಸಿಸಿ ನೋಡಲ್ ಅಧಿಕಾರಿ ಮಂಜುನಾಥ ಮಾತನಾಡಿ, ‘ಈ ತಂಡದಲ್ಲಿ 200 ಕ್ಕೂ ಹೆಚ್ಚು ಮಂದಿ ದಿನದ 24 ಗಂಟೆ ಕಾಲ ಕಾರ್ಯನಿರ್ವಹಿಸಲಿದ್ದಾರೆ. ಯಾವುದೇ ಲೋಪದೋಷ ಕಂಡು ಬಂದಲ್ಲಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಡಿವೈಎಸ್‌ಪಿ ನಾಗರಾಜ್ ಮಾತನಾಡಿ, ‘ಮತಗಟ್ಟೆಯಲ್ಲಿ ಶಾಂತಿಯುತ ಮತದಾನ ನಡೆಯಲು ಬೇಕಾದ ವ್ಯವಸ್ಥೆ ಮಾಡಲಾಗಿದೆ. ಭಯ-ಭೀತಿ ಬಿಟ್ಟು ಸ್ವತಂತ್ರವಾಗಿ ಮತ ಚಲಾಯಿಸುವುದಕ್ಕೆ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಈಗಾಗಲೇ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುತ್ತಿದ್ದು ಸಿಬ್ಬಂದಿಯು ದಿನದ 24 ಗಂಟೆಗಳ ಕಾಲ ಕಾರ್ಯಚರಣೆಯಲ್ಲಿರುವರು’ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಉಪವಿಭಾಗಾಧಿಕಾರಿ ವಿಜಯ ಕುಮಾರ್‌, ಚುನಾವಣಾಧಿಕಾರಿಗಳು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry