7

ಸುನಂದಾ ಪುಷ್ಕರ್‌ ಸಾವಿನ ಪ್ರಕರಣ: ದೆಹಲಿ ಪೊಲೀಸರಿಗೆ ‘ಸುಪ್ರೀಂ’ ನೋಟಿಸ್‌

Published:
Updated:

ನವದೆಹಲಿ: ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರ ಹೆಂಡತಿ ಸುನಂದಾ ಪುಷ್ಕರ್‌ ಸಾವಿನ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ವಿಭಾಗೀಯ ಪೀಠ ದೆಹಲಿ ಪೊಲೀಸರಿಗೆ ನೋಟಿಸ್‌ ಜಾರಿಗೆ ಆದೇಶಿಸಿದೆ.

ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಒಪ್ಪಿಸುವಂತೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ದೆಹಲಿ ಹೈಕೋರ್ಟ್‌ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸ್ವಾಮಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

2014 ಜನವರಿ 17ರಂದು ಸುನಂದಾ ಪುಷ್ಕರ್‌ ಅವರ ಮೃತದೇಹವು ದೆಹಲಿಯ ಪಂಚತಾರಾ ಹೋಟೆಲೊಂದರ ಕೊಠಡಿಯಲ್ಲಿ ಪತ್ತೆಯಾಗಿತ್ತು.

‘ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷ್ಯ ಹಾಗೂ ಮಾಹಿತಿಯನ್ನು ಬಚ್ಚಿಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಪೊಲೀಸರಿಗೆ ಸಾಧ್ಯವಾಗಿಲ್ಲ, ಇದೊಂದು ರಾಜಕೀಯ ಪ್ರೇರಿತ, ಉದ್ದೇಶಪೂರ್ವಕ ಹತ್ಯೆ’ ಎಂಬುದು ಸ್ವಾಮಿ ಆರೋಪ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry