‘55 ಲೀಟರ್‌ ನೀರು ಪೂರೈಕೆ ಜವಾಬ್ದಾರಿ’

7

‘55 ಲೀಟರ್‌ ನೀರು ಪೂರೈಕೆ ಜವಾಬ್ದಾರಿ’

Published:
Updated:
‘55 ಲೀಟರ್‌ ನೀರು ಪೂರೈಕೆ ಜವಾಬ್ದಾರಿ’

ಬೀದರ್‌: ‘ಪ್ರತಿ ವ್ಯಕ್ತಿಗೂ ನಿತ್ಯ 55 ಲೀಟರ್‌ ನೀರು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಎನ್ನುವುದನ್ನು ಗಮನದಲ್ಲಿ ಇಟ್ಟುಕೊಂಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆರ್‌.ಸೆಲ್ವಮಣಿ ಹೇಳಿದರು.

ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಿರಿಯ ಎಂಜಿನಿಯರ್‌ಗಳಿಗೆ ನಗರದ ಸಹಾರ್ದ ಸಂಸ್ಥೆಯಲ್ಲಿ ಆಯೋಜಿಸಿದ್ದ ಮಳೆ ನೀರು ಸಂಗ್ರಹ ಹಾಗೂ ನೀರಿನ ಪುನರ್ ಬಳಕೆ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಳೆಗಾಲದಲ್ಲಿ ವೈಜ್ಞಾನಿಕವಾಗಿ ಮಳೆ ನೀರು ಸಂಗ್ರಹಿಸಿಡಬೇಕು. ಹರಿಯುವ ನೀರನ್ನು ತಡೆದು ನಿಲ್ಲಿಸಿ ಅಂತರ್ಜಲ ಮಟ್ಟ ಹೆಚ್ಚಾಗುವಂತೆ ಮಾಡಬೇಕು. ಜಲ ಸಂರಕ್ಷಣೆಯ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.

‘ಪ್ರಸ್ತುತ ಅಗತ್ಯಕ್ಕಿಂತ ಹೆಚ್ಚು ನೀರು ಬಳಕೆ ಮಾಡಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ನೀರಿಗಾಗಿ ಹೋರಾಟಗಳು ಸಾಧ್ಯತೆ ಇದೆ. ಆದ್ದರಿಂದ ನೀರನ್ನು ಹಿತಮಿತವಾಗಿ ಬಳಸಬೇಕು. ಜಲ ಸಂರಕ್ಷಣೆಗೆ ಆದ್ಯತೆ ಕೊಡಬೇಕು’ ಎಂದು ತಿಳಿಸಿದರು.

‘ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹೊಂಡಗಳನ್ನು ವೈಜ್ಞಾನಿಕವಾಗಿ ನಿರ್ಮಾಣ ಮಾಡುವ ಕುರಿತು ರೈತರಿಗೆ ಮಾರ್ಗದರ್ಶನ ನೀಡಬೇಕು’ ಎಂದು ಹೇಳಿದರು.

ಎಂಜಿನಿಯರ್‌ ಮಾಣಿಕಪ್ಪ ಗೋರನಾಳೆ ಮಾತನಾಡಿದರು. ಪ್ರಮುಖರಾದ ಶಿವಪುತ್ರಪ್ಪ, ಪವನ ಶರ್ಮಾ ಇದ್ದರು. ಸಹಾರ್ದ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry