ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಜಾಮೀನು ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕಾರ

Last Updated 9 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ 2016ರಲ್ಲಿ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಇಬ್ಬರು ಪೋಷಕರಿಗೆ ನೀಡಿದ್ದ ಜಾಮೀನು ರದ್ದುಪಡಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

‘ಪೋಷಕರಿಗೆ ಜಾಮೀನು ನೀಡಿರುವುದನ್ನು ಮುಂದುವರಿಸುತ್ತೇವೆ. ಈ ಪ್ರಕರಣದಲ್ಲಿ ಅವರು 100 ದಿನಗಳ ಕಾಲ ಜೈಲಿನಲ್ಲಿದ್ದರು. ಇದೇ ಅವರಿಗೆ ದೊಡ್ಡ ಪಾಠವಾಗಿದೆ. ಜೀವನದುದ್ದಕ್ಕೂ ಈ ಕಹಿ ಘಟನೆ ಅವರ ನೆನಪಿನಲ್ಲಿರುತ್ತದೆ’ ಎಂದು ನ್ಯಾಯಮೂರ್ತಿಗಳಾದ ರಂಜನ್‌ ಗೊಗೊಯ್‌ ಮತ್ತು ಆರ್‌. ಭಾನುಮತಿ ಅವರನ್ನೊಳಗೊಂಡ ಪೀಠವು ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಎಂ.ವಿ. ರುದ್ರಪ್ಪ ಮತ್ತು ಇತರ ಪೋಷಕರಿಗೆ ಕರ್ನಾಟಕ ಹೈಕೋರ್ಟ್‌ 2016ರ ಜುಲೈ 22ರಂದು ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಬೆಂಗಳೂರಿನ ಮಲ್ಲೇಶ್ವರ ಠಾಣೆಯಲ್ಲಿ 2016ರ ಮಾರ್ಚ್‌ 22ರಂದು ವಂಚನೆ, ಕಳ್ಳತನ ಮತ್ತು ಇತರ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.  ಉಪನ್ಯಾಸಕರು, ಪೋಷಕರು, ಖಜಾನೆ ಇಲಾಖೆ ಉದ್ಯೋಗಿಗಳು ಸೇರಿದಂತೆ 18 ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದ ಸರ್ಕಾರ, ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿತ್ತು.

ಕುಮಾರಸ್ವಾಮಿ, ಶಿವಕುಮಾರಯ್ಯ, ತಿಮ್ಮೇಗೌಡ ಮತ್ತು ನಾಗೇಂದ್ರ ಹೊರತುಪಡಿಸಿ 14 ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT