ಯುವಜನರಲ್ಲಿ ಸ್ವಾವಲಂಬಿತನ ಬೆಳೆಸಿ

7
ಸಮಾರಂಭದಲ್ಲಿ ವಿಧಾನಸಭಾ ಉಪಸಭಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಅಭಿಪ್ರಾಯ

ಯುವಜನರಲ್ಲಿ ಸ್ವಾವಲಂಬಿತನ ಬೆಳೆಸಿ

Published:
Updated:
ಯುವಜನರಲ್ಲಿ ಸ್ವಾವಲಂಬಿತನ ಬೆಳೆಸಿ

ಗೌರಿಬಿದನೂರು: ‘ಇಂದಿನ ಯುಗದಲ್ಲಿ ದಾರಿತಪ್ಪುತ್ತಿರುವ ಯುವ ಪೀಳಿಗೆಯನ್ನು ಉದ್ಯಮಗಳ ಕಡೆ ಆಕರ್ಷಿಸಿ ಸಮಾಜದಲ್ಲಿ ಸ್ವಾವಲಂಬಿ ಬದುಕು ನಡೆಸಲು ಅವಕಾಶ ಮಾಡಿಕೊಡಬೇಕಾಗಿದೆ’ ಎಂದು ವಿಧಾನಸಭಾ ಉಪಸಭಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಅಭಿಪ್ರಾಯಪಟ್ಟರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಅಭಿವೃದ್ಧಿ ಸಂಸ್ಥೆ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಕೈಗಾರಿಕ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಕೈಗಾರಿಕಾ ಉದ್ದಿಮೆದಾರರ ಮತ್ತು ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ತಾಲ್ಲೂಕಿನಲ್ಲಿ ಈಗಾಗಲೇ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸುವ ಜತೆಗೆ ಉತ್ತಮ ಮಾರುಕಟ್ಟೆ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಪ್ರತಿಯೊಂದು ವರ್ಗದ ಜನರಿಗೂ ಪೂರಕವಾದ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಗಳಿಗೆ ಸರ್ಕಾರದಿಂದ ವಿವಿಧ ಯೋಜನೆಗಳಲ್ಲಿ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ದೊರೆಯಲಿವೆ. ಅವುಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಪೀಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಯಾದ್ರಿರೆಡ್ಡಿ ಮಾತನಾಡಿ, ತಾಲ್ಲೂಕಿನಲ್ಲಿ ಈಗಾಗಲೇ ಸುಮಾರು 700 ಎಕರೆ ಜಮೀನಿನಲ್ಲಿ ಬೃಹತ್ ಕೈಗಾರಿಕಾ ವಲಯ ಸ್ಥಾಪಿಸಲಾಗಿದೆ. ಇದಕ್ಕೆ ಪೂರಕವಾಗಿ ಯಲಹಂಕದಿಂದ ಆಂಧ್ರಪ್ರದೇಶದ ಗಡಿಯವರೆಗೆ ಸುವ್ಯವಸ್ಥಿತವಾದ ರಸ್ತೆ ಸೌಲಭ್ಯವಿದೆ. ಇದರಿಂದ ಬಹುತೇಕ ಕಂಪನಿಗಳು ಈ ಭಾಗಕ್ಕೆ ಬರಲು ಆಸಕ್ತಿ ತೋರಿಸುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಯುವ ಪೀಳಿಗೆಗೆ ಅವಶ್ಯಕವಿರುವ ಕೌಶಲ ತರಬೇತಿ ನೀಡುವ ಯೋಜನೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಹೇಳಿದರು.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಸ್ಥಳೀಯ ಶಾಖೆಯ ವ್ಯವಸ್ಥಾಪಕ ಎಸ್.ನಾಗೇಂದ್ರ ಮಾತನಾಡಿ, ರಾಷ್ಟ್ರ ಅಭಿವೃದ್ಧಿ ಕಾಣಬೇಕಾದರೆ ಮೊದಲು ಎಲ್ಲಾ ವಿಧದ ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕಾಗುತ್ತದೆ. ಪ್ರತಿಯೊಬ್ಬರ ಸ್ವಾವಲಂಬಿ ಬದುಕಿಗೆ ಬ್ಯಾಂಕ್ ಸಹಕಾರ ನೀಡಲು ಸದಾ ಸಿದ್ಧವಾಗಿದೆ ಎಂದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಅಭಿವೃದ್ಧಿ ಸಂಸ್ಥೆ ಬಿ.ಎನ್.ಸುಧಾಕರ್, ವಿಜಯಾ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಬಸವರಾಜ್, ಸರ್.ಎಂ.ವಿಶ್ವೇಶ್ವರಯ್ಯ ಕೈಗಾರಿಕಾ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಆರ್.ಗೋವಿಂದರಾಜು, ಕಾರ್ಯದರ್ಶಿ ಶ್ರೀನಿವಾಸ್, ಉದ್ದಿಮೆದಾರರಾದ ಕೆ.ವಿ. ನಂಜುಂಡಗೌಡ, ಗಂಗಲಕ್ಷ್ಮಮ್ಮ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry