‘ಬೇಜವಾಬ್ದಾರಿ ಹೊಂದಿದ ಅಧಿಕಾರಿಗಳ ವಿರುದ್ಧ ಕ್ರಮ’

7
ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನೆ

‘ಬೇಜವಾಬ್ದಾರಿ ಹೊಂದಿದ ಅಧಿಕಾರಿಗಳ ವಿರುದ್ಧ ಕ್ರಮ’

Published:
Updated:

ದೊಡ್ಡಬಳ್ಳಾಪುರ: ಜಿಲ್ಲಾ ಪಂಚಾಯಿತಿ ಸಭೆಗಳಿಗೆ ಅಧಿಕಾರಿಗಳು ಸರಿಯಾದ ಮಾಹಿತಿ ಇಲ್ಲದೆ ಹಾಜರಾಗಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಅರಣ್ಯವಾಸಿಗಳ ಯೋಜನೆಯಡಿ ಪ್ರಗತಿ ಪರಿಶೀಲನೆ ನಡೆಸಿ ಅಧ್ಯಕ್ಷರು ಮಾಹಿತಿ ಕೇಳಿದಾಗ ವಿವಿಧ ಅಧಿಕಾರಿಗಳು ಮಾಹಿತಿ ನೀಡಲು ವಿಫಲರಾದರು. ಕೆಲ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದರು.

ಇದರಿಂದ ಅಸಮಾಧಾನಗೊಂಡ ವಿ.ಪ್ರಸಾದ್ ಅವರು, ಹಲವಾರು ಸಭೆಗಳಿಂದ ಎಚ್ಚರಿಕೆ ನೀಡಿದರೂ ಇದೇ ರೀತಿ ಪುನರಾವರ್ತನೆ ಆಗುತ್ತಿದೆ ಎಂದು ತಿಳಿಸಿದರು.

ಹೊಸಕೋಟೆ ಕಾರ್ಯನಿರ್ವಹಣಾ ಅಧಿಕಾರಿ, ಕೈಗಾರಿಕಾ ಇಲಾಖಾ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಸಹಾಯಕ ಎಂಜಿನಿಯರ್‌ಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡುವಂತೆ ಹಾಗೂ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಂಡರು.

ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಹಲವಾರು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಬೇಕಾದ ಸೌಲಭ್ಯಗಳನ್ನು ಶಾಸಕರು ದಿನಾಂಕ ನಿಗದಿ ಪಡಿಸಿಕೊಂಡು ಕಾರ್ಯಕ್ರಮ ಏರ್ಪಡಿಸಬೇಕು ಹಾಗೂ ಕೆಲವೊಂದು ಯೋಜನೆಗಳಡಿ ಫಲಾನುಭವಿಗಳ ಆಯ್ಕೆಗೊಳಿಸಲು ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ ಕಳೆದ ಸಭೆಗಳಲ್ಲಿಯೇ ಸೂಚಿಸಲಾಗಿತ್ತು. ಆದರೂ ಸಮಿತಿ ರಚನೆ ಮಾಡದ ತಾಲ್ಲೂಕು ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಣೆ ಮಾಡದ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಇನ್ನು ಮುಂದೆ ಶುದ್ಧ ಕುಡಿಯುವ ನೀರು ಘಟಕಗಳನ್ನು ನಿರ್ಮಿಸಲು ಏಜೆನ್ಸಿಗಳಿಗೆ ಅನುಮತಿ ನೀಡುವಾಗ ಗ್ರಾಮ

ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಮಾನ ದಂಡಗಳನ್ನು ನಿಗದಿ ಪಡಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಿ.ಎನ್.ಅನಂತಕುಮಾರಿ, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯ ಯೋಜನಾಧಿಕಾರಿ ವಿನುತಾ

ರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ಸಭೆ ಆರಂಭಕ್ಕೂ ಮುನ್ನ ಹೊಸದಾಗಿ ಆಯ್ಕೆಗೊಂಡಿರುವ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry