ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ

7
₹ 2 ಕೋಟಿ ವೆಚ್ಚದ ಕಟ್ಟಡ; ಸದುಪಯೋಗಕ್ಕೆ ಕರೆ

ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ

Published:
Updated:

ಶ್ರವಣಬೆಳಗೊಳ: ಗುಣಮಟ್ಟದ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಹೋಬಳಿಯ ಜುಟ್ಟನಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳು ಈ ದೇಶದ ಆಸ್ತಿ. ಅವರ ಉಜ್ವಲ ಭವಿಷ್ಯ ಉತ್ತಮವಾಗಬೇಕಾದರೆ ಮೂಲ ಭೂತ ಸೌಲಭ್ಯ ಒದಗಿಸಿದಾಗ ಮಾತ್ರ ಸಾಧ್ಯ. ₹ 2 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ಅದರ ಸದ್ಬಳಕೆ ಮಾಡಿಕೊಳ್ಳಲು ಕರೆ ನೀಡಿದರು.

ತಾಲ್ಲೂಕಿನ 2 ಸಾವಿರ ಮೆಟ್ರಿಕ್‌ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದಂತೆ ಈ ಭಾಗದ ಎಲ್ಲಾ ರಸ್ತೆಗಳನ್ನು ಸಹ ಅಭಿವೃದ್ಧಿಗೊಳಿಸಿದೆ ಎಂದು ಹೇಳಿದರು.

ವಸತಿ ನಿಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿಧಾನ ಪರಿಷತ್‌ ಸದಸ್ಯ ಎಂ.ಎ. ಗೋಪಾಲಸ್ವಾಮಿ, ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ರೂಪಿಸಿದೆ. ಹಳ್ಳಿಯ ರೈತರ ಮಕ್ಕಳು ಸಹ ಉತ್ತಮ ಶಿಕ್ಷಣ ಪಡೆಯಬೇಕಾದರೆ ವಿದ್ಯಾರ್ಥಿ ನಿಲಯಗಳು ಸುಸಜ್ಜಿತ ಕಟ್ಟಡಗಳನ್ನು ಹೊಂದಿರಬೇಕು. ಆಗ ಉತ್ತಮ ಫಲಿತಾಂಶ ಬರಲು ಸಹಾಯವಾಗುತ್ತದೆ ಎಂದರು.

ಚನ್ನರಾಯಪಟ್ಟಣ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಿ.ಎಸ್‌.ಕೃಷ್ಣ ಸ್ವಾಗತಿಸಿ, ವಂದಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ ಎಂ.ಶಂಕರ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಚಂದ್ರೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಸಿ.ಮಂಜೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರೇಣುಕಾ ರಂಗಸ್ವಾಮಿ, ರಂಜಿತಾ ನಿಂಗೇಗೌಡ, ಜುಟ್ಟನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ರಾಜಶೇಖರ್‌, ಮುಖಂಡರಾದ ಪಿ.ಕೆ.ಮಂಜೇಗೌಡ, ನಾಗರಾಜ್‌, ದೇವರಾಜೇಗೌಡ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry