ಮೌಲ್ಯಮಾಪನ ಬಹಿಷ್ಕಾರಕ್ಕೆ ನಿರ್ಧಾರ

7

ಮೌಲ್ಯಮಾಪನ ಬಹಿಷ್ಕಾರಕ್ಕೆ ನಿರ್ಧಾರ

Published:
Updated:

ಬೆಂಗಳೂರು: ವೇತನ ತಾರತಮ್ಯ ಸರಿಪಡಿಸದ ಸರ್ಕಾರದ ಕ್ರಮ ಖಂಡಿಸಿ ಇದೇ 24ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಲು ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರ ಸಂಘಗಳು ನಿರ್ಧರಿಸಿವೆ.

ನಗರದ ಸ್ವತಂತ್ರ ಉದ್ಯಾನದಲ್ಲಿ ಇದೇ 22ರಿಂದಲೇ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘2011ರಲ್ಲಿ ಶಿಕ್ಷಣ ಇಲಾಖೆ ಕಾರ್ಯದರ್ಶಿಯಾಗಿದ್ದ ಜಿ. ಕುಮಾರ ನಾಯ್ಕ್‌ ನೇತೃತ್ವದಲ್ಲಿ ಸಮಿತಿ ರಚಿಸಿ ಸರ್ಕಾರ ವರದಿ ಪಡೆದುಕೊಂಡಿದೆ. ಈ ವರದಿ ಜಾರಿ ಮಾಡಲು ವಿವಿಧ ಹಂತಗಳಲ್ಲಿ ಹೋರಾಟ ನಡೆಸಿದ್ದರೂ ಸ್ಪಂದಿಸಿಲ್ಲ’ ಎಂದಿದ್ದಾರೆ.

‘2017ರಲ್ಲಿ ಮೌಲ್ಯಮಾಪನ ಬಹಿಷ್ಕರಿಸುವ ಕರೆ ನೀಡಿದಾಗ ಸರಿಪಡಿಸುವುದಾಗಿ ಶಿಕ್ಷಣ ಸಚಿವರು ಲಿಖಿತ ಭರವಸೆ ನೀಡಿದ್ದರು. ಆದರೆ, ಆರನೇ ವೇತನ ಆಯೋಗದ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪವೇ ಇಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ನಿರ್ಲಕ್ಷ್ಯ ಖಂಡಿಸಿ ದ್ವಿತೀಯ ಪಿಯು ಪರೀಕ್ಷಾ ಕರ್ತವ್ಯವನ್ನು ಕಪ್ಪುಪಟ್ಟಿ ಕಟ್ಟಿಕೊಂಡು ನಿರ್ಹಿಸಿದ್ದೇವೆ. ಆದರೂ ಸರ್ಕಾರ ಕಿವಿಗೊಟ್ಟಿಲ್ಲ. ಅನಿವಾರ್ಯವಾಗಿ ಮೌಲ್ಯಮಾಪನ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry