ಮಧ್ಯಪ್ರವೇಶಿಸಲು ಹೈಕೋರ್ಟ್ ನಕಾರ

7

ಮಧ್ಯಪ್ರವೇಶಿಸಲು ಹೈಕೋರ್ಟ್ ನಕಾರ

Published:
Updated:
ಮಧ್ಯಪ್ರವೇಶಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ವಿ. ನಟರಾಜನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಒದಗಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ಕುಮಾರ್‌ ವರದಿ ಪ್ರಶ್ನಿಸಿದ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್‌ ನಿರಾಕರಿಸಿದೆ.

ವಿನಯ್‌ಕುಮಾರ್‌ ವರದಿ ರದ್ದುಪಡಿಸುವಂತೆ ಕೋರಿ ನಿವೃತ್ತ ಐಪಿಎಸ್‌ ಅಧಿಕಾರಿ ಎಚ್‌.ಎನ್‌.ಸತ್ಯನಾರಾಯಣ ರಾವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ವಕೀಲ ಪುತ್ತಿಗೆ ಆರ್‌. ರಮೇಶ್‌, ‘ಸತ್ಯನಾರಾಯಣ ರಾವ್ ದಕ್ಷ ಅಧಿಕಾರಿ ಎಂದು ಹೆಸರು ಮಾಡಿದವರು. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರೂ ಹೌದು. ವಿನಯ್‌ ಕುಮಾರ್ ವರದಿಯಲ್ಲಿ ಇವರಿಗೆ ಕ್ಲೀನ್ ಚಿಟ್‌ ನೀಡಲಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ’ ಎಂದು ತಿಳಿಸಿದರು. ಇದಕ್ಕೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್ ಎ.ಎಸ್‌.ಪೊನ್ನಣ್ಣ, ‘ಈಗಾಗಲೇ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸತ್ಯನಾರಾಯಣ ರಾವ್ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ’ ಎಂದು ನ್ಯಾಯಪೀಠದ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಎಸಿಬಿ ತನಿಖೆ ಮುಂದುವರಿಸಲಿ. ಬೇಕಿದ್ದರೆ ಎಫ್‌ಐಆರ್‌ ರದ್ದುಕೋರಿ ಹೊಸ ಅರ್ಜಿ ಸಲ್ಲಿಸಿ’ ಎಂದು ಅರ್ಜಿದಾರರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಕಾರಾಗೃಹದಲ್ಲಿ ವಿಶೇಷ ಸೌಲಭ್ಯ

‘ಕಾರಾಗೃಹ ಇಲಾಖೆ ಡಿಜಿಪಿ ಆಗಿದ್ದ ಎಚ್.ಎನ್.ಸತ್ಯ ನಾರಾಯಣ ರಾವ್ ₹ 2 ಕೋಟಿ ಲಂಚ ಪಡೆದು ಶಶಿಕಲಾಗೆ ವಿಐಪಿ ಸೌಲಭ್ಯ ಒದಗಿಸಿದ್ದಾರೆ’ ಎಂದು ಆರೋಪಿಸಿ ಆಗಿನ ಡಿಐಜಿ ಡಿ.ರೂಪಾ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಇದಕ್ಕೆ ಪೂರಕವಾಗಿ ವಿನಯ್ ಕುಮಾರ್ ಸಮಿತಿ ವರದಿ ಕೊಟ್ಟಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry