7
ಡಿಸಿಸಿ ಬ್ಯಾಂಕ್‌ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದ ಸಾಲದ ಚೆಕ್‌ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ.ಸುಧಾಕರ್ ಹೇಳಿಕೆ

ಮಹಿಳಾ ಸಬಲೀಕರಣಕ್ಕೆ ಸರ್ಕಾರದ ಆದ್ಯತೆ

Published:
Updated:

ಚಿಕ್ಕಬಳ್ಳಾಪುರ: ‘ಮಹಿಳೆಯರು ಸಬಲೀಕರಣಕ್ಕೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ ಶೂನ್ಯ ಬಡ್ಡಿ ದರದ ಸಾಲವನ್ನು ವಿತರಿಸಿ ಮಹಿಳೆಯರಲ್ಲಿ ಆರ್ಥಿಕ ಶಕ್ತಿ ತುಂಬುತ್ತಿದೆ’ ಎಂದು ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

ನಗರದಲ್ಲಿ ಗುರುವಾರ ಆಯೋಜಿಸಿದ್ದ ಡಿಸಿಸಿ ಬ್ಯಾಂಕ್‌ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದ ಸಾಲದ ಚೆಕ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸಲು ರಾಜ್ಯ ಸರ್ಕಾರ ವಿಶೇಷ ಮುತುವರ್ಜಿ ವಹಿಸಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದ ಸಾಲವನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮುಂದಾಗಿದೆ. ಹೆಣ್ಣು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಉಚಿತ ಶಿಕ್ಷಣ ನೀಡುತ್ತಿದೆ. ಜತೆಗೆ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ’ ಎಂದು ಹೇಳಿದರು.

‘ಮಹಿಳೆಯರು ಸಮಾಜದಲ್ಲಿ ಇವತ್ತು ಶೈಕ್ಷಣಿಕವಾಗಿ ಸಬಲರಾಗಬೇಕು. ಪೋಷಕರು ಹೆಣ್ಣು ಮಕ್ಕಳಿಗೆ 10ನೇ ತರಗತಿವರೆಗೆ ವಿದ್ಯಾಭ್ಯಾಸ ಕೊಡಿಸಿದರೆ ಸಾಲದು. ಉನ್ನತ ವ್ಯಾಸಂಗಕ್ಕೆ ಅನುವು ಮಾಡಿಕೊಡಬೇಕು. ಇದರಿಂದ ಹೆಣ್ಣು ಮಕ್ಕಳು ಮುಂದಿನ ಭವಿಷ್ಯದಲ್ಲಿ ಸ್ವತಃ ಇಚ್ಛಾ ಶಕ್ತಿಯಿಂದ ಜೀವನವನ್ನು ರೂಪಿಸಿಕೊಳ್ಳಬಹುದು’ ಎಂದು ತಿಳಿಸಿದರು.

‘ಮಹಿಳೆಯರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಉಚಿತ ಅಡುಗೆ ಸಿಲಿಂಡರ್ ನೀಡುವ ಅನಿಲ ಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಅಡುಗೆ ಅನಿಲ ಸಂಪರ್ಕ ಹೊಂದಿರದ ಕುಟುಂಬಗಳು ಅರ್ಜಿ ಸಲ್ಲಿಸಿ ಈ ಯೋಜನೆ ಲಾಭ ಪಡೆದುಕೊಳ್ಳಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಶೀಘ್ರದಲ್ಲೇ ಅಡುಗೆ ಅನಿಲ ಸಂಪರ್ಕ ಒದಗಿಸಲು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘ಕಳೆದ ಎರಡು ವರ್ಷಗಳಲ್ಲಿಸಾಯಿ ಕೃಷ್ಣ ಚಾರಿಟಬಲ್ ಟ್ರಸ್ಟ್‌ ವತಿಯಿಂದ 2 ಸಾವಿರ ಸ್ತ್ರೀ ಶಕ್ತಿ ಸಂಘಗಳ ರಚನೆ ಮಾಡಲಾಗಿದೆ. ಡಿಸಿಸಿ ಬ್ಯಾಂಕ್‌ನಿಂದ 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಗೆ ಶೂನ್ಯ ಬಡ್ಡಿದರ ಸಾಲವನ್ನು ವಿತರಣೆ ಮಾಡಲಾಗಿದೆ. ಮುಂದಿನ 6 ತಿಂಗಳಲ್ಲಿ 5 ಸಾವಿರಕ್ಕೂ ಹೆಚ್ಚು ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದೆ’ ಎಂದರು.

ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಚ್.ವಿ.ನಾಗರಾಜ್ ಮಾತನಾಡಿ, ‘ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ 20 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ ವತಿಯಿಂದ ₹ 350 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಸಂಘಗಳ ಸದಸ್ಯರು ಸಕಾಲಕ್ಕೆ ಸಾಲ ಮರುಪಾವತಿ ಮಾಡುತ್ತಿರುವುದು ಹೆಮ್ಮೆಯ ವಿಚಾರ’ ಎಂದು ತಿಳಿಸಿದರು.

ತಾಲ್ಲೂಕಿನ 146 ಸ್ತ್ರೀ ಶಕ್ತಿ ಸಂಘಗಳಿಗೆ ₹ 4.24 ಕೋಟಿ ಶೂನ್ಯ ಬಡ್ಡಿ ದರದ ಸಾಲದ ಚೆಕ್‌ಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಮಹಿಳೆಯರಿಗೆ ಸೀರೆ ವಿತರಿಸಲಾಯಿತು.

ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಂ.ಮುನಿಯಪ್ಪ, ಮಾಜಿ ಶಾಸಕಿ ಅನಸೂಯಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ರೀರಾಮರೆಡ್ಡಿ, ನಗರಸಭೆ ಸದಸ್ಯರಾದ ಭಾರತಿ ಆನಂದರೆಡ್ಡಿ, ಭಾರತಿದೇವಿ, ಸಿಂಧೂರ್, ಗಜೇಂದ್ರ, ಕೃಷ್ಣಮೂರ್ತಿ, ಶ್ರೀಧರ್, ರಾಮ್‌ಕುಮಾರ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry