ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾವಂತರಿಂದಲೇ ಜನನ ಪೂರ್ವ ಲಿಂಗ ಪತ್ತೆ

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ದೇವೇಂದ್ರಪ್ಪ ಆತಂಕ
Last Updated 31 ಜುಲೈ 2018, 14:33 IST
ಅಕ್ಷರ ಗಾತ್ರ

ಹಾಸನ: ‘ವಿದ್ಯಾವಂತರಿಂದಲೇ ಜನನ ಪೂರ್ವ ಲಿಂಗಪತ್ತೆ ಕಾರ್ಯ ನಡೆಯುತ್ತಿದೆ’ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ದೇವೇಂದ್ರಪ್ಪ ಯಮನಪ್ಪ ಬಸಾಪುರ ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಸರ್ಕಾರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜನನ ಪೂರ್ವ ಲಿಂಗ ಪತ್ತೆ ನಿಷೇಧ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸ್ಕ್ಯಾನಿಂಗ್ ಮಾಡಿ ಲಿಂಗ ಪತ್ತೆ ಮಾಡಬಾರದು ಎಂದು ಕಾನೂನಿನಲ್ಲಿ ಹೇಳಿದ್ದರೂ ಅಪರಾಧಂತಹ ಕೆಲಸಕ್ಕೆ ಕೈ ಹಾಕುತ್ತಿರುವುದು ಸಮಾಜಕ್ಕೆ ಮಾರಕವಾಗಿದೆ. ಗರ್ಭದಲ್ಲಿರುವ ಶಿಶು ಪ್ರಪಂಚ ನೋಡುವ ಮೊದಲೇ ಅದನ್ನು ಕೊಲ್ಲುವ ಮೂಲಕ ಕಾನೂನು ಉಲ್ಲಂಘನೆ ಮಾಡಲಾಗುತ್ತಿದೆ. ಮಗು ತಾಯಿ ಹೊಟ್ಟೆಯಲ್ಲಿರುವಾಗಲೇ ಕಾನೂನು ಪ್ರಾರಂಭವಾಗುತ್ತದೆ. ಇದನ್ನು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಅರ್ಥ ಮಾಡಿಕೊಂಡು ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಉಚಿತವಾಗಿ ಕಾನೂನು ಸೇವೆ ನೀಡಲಾಗುತ್ತಿದೆ. ಇದು ಮಹಿಳೆಯರಿಗೂ ಲಭ್ಯವಿದೆ. ಅಂಗವಿಕಲರು, ಪರಿಶಿಷ್ಟ ಜಾತಿ, ಪಂಗಡದವರು ಹಾಗೂ ಯೋಧರು ಕಾನೂನು ನೆರವು ಸದುಪಯೋಗ ಪಡಿಸಿಕೊಳ್ಳಬಹುದು’ ಎಂದು ನುಡಿದರು.

ವಕೀಲರ ಸಂಘದ ಎಂ.ಡಿ. ವೆಂಕಟೇಶ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಪುರುಷ ಮತ್ತು ಮಹಿಳೆಯರ ನಡುವೆ ತಾರತಮ್ಯ ಮಾಡಲಾಗುತ್ತಿದೆ. ಗರ್ಭದೊಳಗೆ ಇರುವ ಮಗು ಯಾವುದೆಂದು ತಿಳಿಯಲು ಪರೀಕ್ಷೆ ಮಾಡಿಸುವ ಮತ್ತು ಮಾಡುವ ಇಬ್ಬರೂ ಅಪರಾಧಿಗಳಾಗುತ್ತಾರೆ’ ಎಂದು ಎಚ್ಚರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಎಂ. ಸತೀಶ್, ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಕೆ. ಬಸವರಾಜು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಉಮೇಶ್, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT