ಸೇವೆ ಕಾಯಂಗೆ ಒತ್ತಾಯಿಸಿ ಪ್ರತಿಭಟನೆ

7
ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಆಗ್ರಹ

ಸೇವೆ ಕಾಯಂಗೆ ಒತ್ತಾಯಿಸಿ ಪ್ರತಿಭಟನೆ

Published:
Updated:

ಚಿಕ್ಕಬಳ್ಳಾಪುರ: ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ‘ಡಿ’ ಗ್ರೂಪ್ ನೌಕರರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ನಗರದ ಕೆ.ಎಸ್‌.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಜಿಲ್ಲಾಡಳಿತ ಭವನದ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದಸ್ವಾಮಿ, ‘ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯಗಳಲ್ಲಿ 800 ಜನರು ಡಿ ಗ್ರೂಪ್‌ ನೌಕರರಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇವರನ್ನು ಇತ್ತೀಚಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದಾರೆ. ಆದರೆ ಆಗ ಈ ನೌಕರರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತು ಒದಗಿಸದೇ ಅತಂತ್ರ ಸ್ಥಿತಿಗೆ ದೂಡಲಾಗಿದೆ’ ಎಂದು ಆರೋಪಿಸಿದರು.

‘20 ವರ್ಷಗಳಿಂದ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂ ಗೊಳಿಸಿ ಸೇವಾ ಭದ್ರತೆ ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ನೌಕರರನ್ನು ಕೆಲಸದಿಂದ ಕೈಬಿಡುವ ಹುನ್ನಾರಗಳನ್ನು ನಡೆಸಿದರೆ ಸಂಘದಿಂದ ಉಗ್ರ ಹೋರಾಟ ನಡೆಸಲಾಗುತ್ತದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ನೌಕರರಿಗೆ ಸೇವಾ ಭದ್ರತೆ ಕಲ್ಪಿಸಿ ಕೊಡಲು ಸೂಕ್ತ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ತಿಳಿಸಿದರು.

‘ನೇರ ನೇಮಕಾತಿಯಲ್ಲಿ ನೌಕರ ರನ್ನು ನೇಮಿಸಿಕೊಂಡಾಗ ಅಥವಾ ವರ್ಗವಾಗಿ ಬಂದಾಗ ಯಾವುದೇ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕಬಾರದು. ಹಾಲಿ ಕೆಲಸ ಮಾಡುತ್ತಿರುವ ನೌಕರರು ನಿವೃತ್ತಿ ಹೊಂದುವವರೆಗೂ ಸೇವಾ ಭದ್ರತೆ ಒದಗಿಸಬೇಕು. ಅವೈಜ್ಞಾನಿಕ ವೇತನ ನಿಲ್ಲಿಸಿ ಕಾನೂನುಬದ್ಧ ವೇತನ ನೇರವಾಗಿ ನೌಕರರ ಖಾತೆಗೆ ಜಮಾ ಮಾಡಬೇಕು’ ಎಂದು ಆಗ್ರಹಿಸಿದರು.

‘ಕಳೆದ ಕೆಲ ವರ್ಷಗಳಲ್ಲಿ ಕ್ಷುಲಕ ಕಾರಣಗಳು ಮತ್ತು ಸುಳ್ಳು ಆಪಾದನೆಗಳ ಮೇಲೆ ಕೆಲಸದಿಂದ ತೆಗೆದು ಹಾಕಿರುವ ನೌಕರರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ನೌಕರರಿಗೆ ಕಿರುಕುಳ ನೀಡುವ ಅಧಿಕಾರಿಗಳು ಮತ್ತು ಸಂಬಳದಲ್ಲಿ ಅಕ್ರಮವಾಗಿ ಹಣ ಕಡಿತಗೊಳಿಸುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಘಟಕ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಮಾತನಾಡಿ, ‘ನ್ಯಾಯಾಲಯದ ಆದೇಶದಂತೆ ಸರ್ಕಾರಕ್ಕೆ ಸಲ್ಲಿಸಿರುವ ನೌಕರರ ಪಟ್ಟಿಯು ಅಸಂಬದ್ಧವಾಗಿದೆ. ದಶಕಗಳಿಂದ ಕಾರ್ಯನಿರ್ವಹಿಸಿರುವ ಕೆಲ ನೌಕರರನ್ನು ಆ ಪಟ್ಟಿಯಲ್ಲಿ ಕೈಬಿಡಲಾಗಿದೆ. ಈ ಕೂಡಲೇ ಪರಿಷ್ಕೃತ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಮುನಿಯಪ್ಪ, ಉಪಾ ಧ್ಯಕ್ಷ ನಾರಾಯಣನಾಯ್ಕ, ಖಜಾಂಚಿ ನರಸಿಂಹಮೂರ್ತಿ, ತಾಲೂಕು ಅಧ್ಯಕ್ಷ ಪಾಪಣ್ಣ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.**

ಜಿಲ್ಲೆಯಲ್ಲಿ ವಸತಿ ನಿಲಯಗಳ ‘ಡಿ’ ಗ್ರೂಪ್ ನೌಕರರು ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ ಅಧಿಕಾರಿಗಳು ಈವರೆಗೆ ಇಎಸ್‌ಐ ಕಾರ್ಡ್‌ ವಿತರಣೆ ಮಾಡಿಲ್ಲ.

- ನಿತ್ಯಾನಂದಸ್ವಾಮಿ, ಸಂಘದ ರಾಜ್ಯ ಘಟಕದ ಅಧ್ಯಕ್ಷ 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry