ಶನಿವಾರ, ಡಿಸೆಂಬರ್ 7, 2019
26 °C
ಸ್ವೀಪ್ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಹೇಳಿಕೆ

ಆಯೋಗದ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಯೋಗದ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ

ಯಾದಗಿರಿ: ‘ಬೂತ್‌ಮಟ್ಟದ ಅಧಿಕಾರಿಗಳು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಭಾರತೀಯ ಚುನಾವಣಾ ಆಯೋಗದ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು’ ಎಂದು ಹೆಚ್ವುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಅಧಿಕಾರಿಗಳನ್ನು ಎಚ್ಚರಿಸಿದರು.ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಯಾದಗಿರಿ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಸಿಬ್ಬಂದಿಯ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರಾಜಕೀಯ ಮುಖಂಡರು, ಕಾರ್ಯಕರ್ತರು ಬೆದರಿಕೆ ಒಡ್ಡಿದರೆ ಹೆದರದೇ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಿಬ್ಬಂದಿಯ ಬೆಂಬಲಕ್ಕೆ ಜಿಲ್ಲಾಡಳಿತ ನಿಲ್ಲುತ್ತದೆ. ಸಮಸ್ಯೆ ಮತ್ತು ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು 1077 ಸಂಖ್ಯೆಗೆ ಉಚಿತ ಕರೆ ಮಾಡಬಹುದು’ ಎಂದು ಸೂಚಿಸಿದರು.

‘ಏ.14ರ ವರೆಗೆ ಚುನಾವಣಾ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕಾಲಾವಕಾಶ ಇದೆ. ಈ ನಿಟ್ಟಿನಲ್ಲಿ ಏ. 8ರಂದು ಮಿಂಚಿನ ನೋಂದಣಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. 18ವರ್ಷ ಪೂರೈಸಿದ ಪ್ರತಿಯೊಬ್ಬರ ಹೆಸರು ನೋಂದಾಯಿಸುವಂತೆ ಪ್ರೋತ್ಸಾಹಿಸಬೇಕು’ ಎಂದರು.

‘ಮತದಾನ ಪ್ರಮಾಣ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಗ್ರಾಮೀಣ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅಂಗವಿಕಲ ಮತದಾರರಿಗೆ ಮತಗಟ್ಟೆಯ ಬಳಿ ರ‍್ಯಾಂಪ್, ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.

‘ಸ್ವೀಪ್ ಸಮಿತಿ ಕಾರ್ಯಚಟುವಟಿಕೆ ಯಲ್ಲಿ ತೊಡಗಿಕೊಂಡಿರುವ ನೌಕರರು 24ಗಂಟೆಯೂ ಗ್ರಾಮದಲ್ಲಿ ಲಭ್ಯರಿರಬೇಕು. ಅಂಗವಿಕಲ ನೌಕರರು ಸ್ವ-ಇಚ್ಛೆಯಿಂದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು’ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಭಗವಂತ ಅನವಾರ, ತಾಲ್ಲೂಕು ಆರೋಗ್ಯ ಅಧಿಕಾರಿ ಮಲ್ಲಪ್ಪ, ಯಾದಗಿರಿ ವಿಧಾನಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿ ಅಬ್ದುಲ್ ರೆಹಮಾನ್ ಖಾನ್, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ, ಸಿದ್ಧಾರೆಡ್ಡಿ ಇದ್ದರು.ಬೂತ್ ಮಟ್ಟದ ಅಧಿಕಾರಿಗಳು, ಸಿಆರ್‌ಪಿ, ಬಿಆರ್‌ಪಿ, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

**

ಅಕ್ರಮ ತಡೆಗಟ್ಟಿ ಪಾದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಸಿಬ್ಬಂದಿಯನ್ನೇ ನೆಚ್ಚಿಕೊಂಡಿದೆ. ಆ ಆಶಯದಂತೆ ಕರ್ತವ್ಯ ನಿರ್ವಹಿಸೋಣ – ಪ್ರಕಾಶ ಜಿ.ರಜಪೂತ, ಹೆಚ್ಚುವರಿ ಜಿಲ್ಲಾಧಿಕಾರಿ.

**

ಪ್ರತಿಕ್ರಿಯಿಸಿ (+)