ದೌರ್ಜನ್ಯ ತಡೆ ಕಾಯ್ದೆ ದುರ್ಬಲ: ಆರೋಪ

7
ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಹರಿಹಾಯ್ದ ಪ್ರತಿಭಟನಾಕಾರರು

ದೌರ್ಜನ್ಯ ತಡೆ ಕಾಯ್ದೆ ದುರ್ಬಲ: ಆರೋಪ

Published:
Updated:

ಮೈಸೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಶುಕ್ರವಾರ ಪ್ರತ್ಯೇಕ ಪ್ರತಿಭಟನೆಗಳು ನಡೆದವು.ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕರ್ನಾಟಕ ದಲಿತ ವೇದಿಕೆಯ ಕಾರ್ಯಕರ್ತರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿವೆ. ಸಂಘ ಪರಿವಾರದ ಕಾರ್ಯಕರ್ತರೇ ಹೆಚ್ಚಾಗಿ ಈ ದೌರ್ಜನ್ಯ ಎಸಗುತ್ತಿದ್ದಾರೆ. ಇದನ್ನು ಕಂಡರೂ ಪ್ರಧಾನಿ ನರೇಂದ್ರ ಮೋದಿ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು.

ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸುವ ಹುನ್ನಾರ ನಾಲ್ಕು ವರ್ಷಗಳಿಂದ ವ್ಯವಸ್ಥಿತವಾಗಿ ನಡೆದಿದೆ. ಈ ಮೂಲಕ ದಲಿತರಲ್ಲಿ ಮತ್ತಷ್ಟು ಆತಂಕ ಹುಟ್ಟುಹಾಕಲಾಗಿದೆ. ಶೋಷಿತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿ.ಎಸ್‌.ಸಿದ್ದಲಿಂಗಮೂರ್ತಿ, ಎಂ.ರೇವಣ್ಣ, ಧನಂಜಯ್‌, ಹಿನಕಲ್‌ ಸೋಮು ಇದ್ದರು.

ಗೋಲಿಬಾರ್‌ಗೆ ಖಂಡನೆ:

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಕುರಿತು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪು ಮರುಪರಿಶೀಲನೆಗೆ ಒತ್ತಾಯಿಸಿದ ದಲಿತರ ಮೇಲೆ ಗೋಲಿಬಾರ್‌ ನಡೆಸಿದ ಕ್ರಮ ಖಂಡಿಸಿ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಉತ್ತರಪ್ರದೇಶ, ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ ಹಾಗೂ ಗುಜರಾತ್‌ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಬಿಜೆಪಿ ಸರ್ಕಾರ ಹತ್ತಿಕ್ಕಲು ಪ್ರಯತ್ನಿಸಿದೆ. ಪೊಲೀಸರ ಗುಂಡೇಟಿಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೋರಾಟದ ಧ್ವನಿಯನ್ನು ಹತ್ತಿಕ್ಕಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಮಜೀದ್‌, ಜಿಲ್ಲಾ ಘಟಕದ ಅಧ್ಯಕ್ಷ ಅಜಂ ಪಾಷಾ, ಕಾರ್ಯದರ್ಶಿ ಕೌಶಾನ್‌ ಬೇಗ್, ಪಾಲಿಕೆ ಸದಸ್ಯ ಸ್ವಾಮಿ ಇದ್ದರು.

ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಕೋರಿಕೆ

ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಗೊಂಡ ಬಳಿಕ ದಲಿತರಲ್ಲಿ ಆತಂಕ ಹೆಚ್ಚಾಗಿದೆ. ಈ ಕಳವಳ ನಿವಾರಿಸಲು ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ಸದಸ್ಯರು ಪತ್ರ ಚಳವಳಿ ನಡೆಸಿದರು.ಕಾಯ್ದೆಗೆ ಸರಿಯಾದ ತಿದ್ದುಪಡಿ ತಂದು ದಲಿತರನ್ನು ರಕ್ಷಿಸುವಂತೆ ಸಂಸತ್ತಿಗೆ ಸೂಚನೆ ನೀಡಬೇಕು. ಶೋಷಿತರಿಗೆ ರಕ್ಷಣೆ ನೀಡಬೇಕು ಹಾಗೂ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಮನವಿ ಮಾಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry