ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ರ‍್ಯಾಲಿ ಮೂಲಕ ಮತದಾನ ಜಾಗೃತಿ

ಜಿಲ್ಲಾ ಪಂಚಾಯಿತಿ ಸಿಇಒ ವಿಕಾಸ್ ಸುರಳಕರ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಚಾಲನೆ
Last Updated 10 ಏಪ್ರಿಲ್ 2018, 5:27 IST
ಅಕ್ಷರ ಗಾತ್ರ

ಬಾಗಲಕೋಟೆ: ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬೈಕ್ ರ‍್ಯಾಲಿ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ್ ಸುರಳಕರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸ್ವತಃ ಬೈಕ್ ಸವಾರಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ಜಿಲ್ಲಾಡಳಿತ ಭವನದಿಂದ ಪ್ರಾರಂಭವಾದ ರ‍್ಯಾಲಿಯು ಬಸವೇಶ್ವರ ಬ್ಯಾಂಕ್, ನವನಗರದ ಕಾಳಿದಾಸ ವೃತ್ತ, ವಿದ್ಯಾಗಿರಿಯ ಎಂಜಿನಿಯರಿಂಗ್ ಕಾಲೇಜು ವೃತ್ತ, ವಿದ್ಯಾಗಿರಿ 6ನೇ ಕ್ರಾಸ್, ಪೊಲೀಸ್ ಸ್ಟೇಷನ್, ಕೃಷ್ಣಾ ಟಾಕೀಸ್, ಪಂಕಾ ಮಸೂತಿ, ವಲ್ಲಭಭಾಯಿ ಚೌಕ್, ಬಸವೇಶ್ವರ ಸರ್ಕಲ್, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಎಪಿಎಂಸಿ ಮಾರ್ಗದ ಮೂಲಕ ಸಂಚರಿಸಿ ಜಿಲ್ಲಾಡಳಿತ ಭವನಕ್ಕೆ ಬಂದು ಕೊನೆಗೊಂಡಿತು.

ರ‍್ಯಾಲಿಯುದ್ದಕ್ಕೂ ಮತದಾನದ ಮಹತ್ವ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಮೇ 12 ರಂದು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮತದಾರರ ಜಾಗೃತಿ ಕುರಿತಾದ ಘೋಷಣೆಗಳ ಫಲಕಗಳನ್ನು ಪ್ರದರ್ಶಿಸಲಾಯಿತು. ರ‍್ಯಾಲಿಯಲ್ಲಿ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಬೈಕ್ ಸವಾರಿ ನಡೆಸಿದ್ದು ಗಮನ ಸೆಳೆಯಿತು.

ಈ ವೇಳೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಮೇಶ ಕುಮಾರ, ಉಪನಿರ್ದೇಶಕರಾದ ಕೊಂಗವಾಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಎಸ್. ಶಿರೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಾಮಾಕ್ಷಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎ.ಎನ್. ದೇಸಾಯಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಹೊಕಾಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿ.ವಿ. ಚೈತ್ರಾ, ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕನವಾಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಬಳ್ಳಾರಿ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿಕಲಚೇತನರು ಪಾಲ್ಗೊಂಡಿದ್ದರು.

ಹೆಲ್ಮೆಟ್‌ ಧರಿಸಿರಲಿಲ್ಲ...

ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬೈಕ್‌ ರ‍್ಯಾಲಿ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಇದೊಂದು ಒಳ್ಳೆಯ ಕೆಲಸ. ಆದರೆ, ರ‍್ಯಾಲಿ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು ಹೆಲ್ಮೆಟ್ ಧರಿಸಿದ್ದರೆ, ಸಾರ್ವಜನಿಕರಿಗೆ ಹೆಲ್ಮೆಟ್ ಬಗ್ಗೆ ಕೂಡ ಹೆಚ್ಚಿನ ಅರಿವು ಮೂಡಿಸಿದಂತಾಗುತ್ತಿತ್ತು ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT