ಶನಿವಾರ, ಆಗಸ್ಟ್ 15, 2020
23 °C
ಸ್ವೀಪ್‌ ಸಮಿತಿ ಆಶ್ರಯದಲ್ಲಿ ಸ್ತ್ರೀಶಕ್ತಿ ಗುಂಪುಗಳಿಗೆ ವಿವಿ ಪ್ಯಾಟ್‌, ಇವಿಎಂ ಬಳಕೆ ಕುರಿತು ಮಾಹಿತಿ

ಮಹಿಳೆಯರಿಗೆ ಪ್ರತಿಜ್ಞಾ ವಿಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹಿಳೆಯರಿಗೆ ಪ್ರತಿಜ್ಞಾ ವಿಧಿ

ತುಮಕೂರು: ‘ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಲು ನಾವು ಕಡ್ಡಾಯವಾಗಿ ಮತ ಚಲಾಯಿಸುತ್ತೇವೆ’ ಎಂದು ಮಹಿಳೆಯರು ಸೋಮವಾರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ನಗರದ ಬಾಲಭವನದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಸಹಭಾಗಿತ್ವ ಸಮಿತಿಯು (ಸ್ವೀಪ್‌) ಸ್ತ್ರೀಶಕ್ತಿ ಗುಂಪುಗಳಿಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಮತದಾನ ಪ್ರಮಾಣ ಕಡಿಮೆಯಾಗಿತ್ತು. ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ಎಲ್ಲರೂ ಪ್ರತಿಜ್ಞೆ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಅಂಗವಿಕಲರು, ಮಹಿಳೆಯರಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮಹಿಳಾ ಮತದಾರರು ಮನೆಯಿಂದ ಹೊರಬಂದು ಕಡ್ಡಾಯವಾಗಿ ಮತದಾನ ಮಾಡಬೇಕು. ಮತಗಟ್ಟೆಗಳಲ್ಲಿ ಆದ್ಯತೆ ಮೇರೆಗೆ ಮತದಾನದ ಅವಕಾಶ, ಮಹಿಳಾ ಸಿಬ್ಬಂದಿಗಳೇ ಕಾರ್ಯನಿರ್ವಹಿಸುವ ಮತಗಟ್ಟೆಗಳು ಸೇರಿದಂತೆ ಮಹಿಳೆಯರ ಮತದಾನಕ್ಕಾಗಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ಚುನಾವಣಾಧಿಕಾರಿಗಳಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು. ಹಿರಿಯ ನಾಗರಿಕರು, ಲೈಂಗಿಕ ಅಲ್ಪಸಂಖ್ಯಾತರು, ಅಂಗವಿಕಲರು, ಮಹಿಳೆಯರಿಗೆ ಮತದಾನದ ಜಾಗೃತಿ ಮೂಡಿಸಲು ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಚ್‌.ಎಸ್.ಪರಮೇಶ್ವರಪ್ಪ ಮಾತನಾಡಿ, ಮತದಾನ ಮಾಡುವವರ ಸಂಖ್ಯೆ ಕಡಿಮೆಯಾಗಿದೆ.  ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಆ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಸ್ತ್ರೀಶಕ್ತಿ ಗುಂಪುಗಳು ಇವಿಎಂ (ವಿದ್ಯುನ್ಮಾನ ಮತಯಂತ್ರ) ಹಾಗೂ ವಿವಿ ಪ್ಯಾಟ್ (ಮತಖಾತ್ರಿ ಯಂತ್ರ) ಬಗ್ಗೆ ತಿಳಿದು ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ, ಸ್ತ್ರೀಶಕ್ತಿ ಗುಂಪುಗಳು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಸಹಕಾರ ನೀಡಿವೆ. ಅದರಂತೆಯೇ ಚುನಾವಣೆಯಲ್ಲಿ ನ್ಯಾಯಸಮ್ಮತ ಹಾಗೂ ಮುಕ್ತ ಮತದಾನಕ್ಕೆ ಸಹಕರಿಸಬೇಕು. ಸ್ತ್ರೀಶಕ್ತಿ ಸಂಘಗಳ ಬ್ಯಾಂಕ್ ಖಾತೆಗೆ ಅನಧಿಕೃತ ಹಣ ಬಂದರೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

ಮುಖ್ಯ ತರಬೇತುದಾರ ಡಾ.ಜಿ.ವಿ.ಗೋಪಾಲ್ ಮಾತನಾಡಿ, ‘ಸರ್ಕಾರದಿಂದ ಸಾಲ, ಸಹಾಯಧನ ಸೇರಿದಂತೆ ನಮಗೆ ಬೇಕಾದ ಸೌಲಭ್ಯವನ್ನು ಪಡೆದುಕೊಳ್ಳುತ್ತೇವೆಯೇ ಹೊರತು ಮತದಾನ ಮಾಡಲು ಮುಂದಾಗುವುದಿಲ್ಲ. ಮತದಾನದ ಬಗ್ಗೆ ತಾತ್ಸಾರ ಬೇಡ. ದೇಶದ ಆರ್ಥಿಕ, ಸಾಮಾಜಿಕ ವ್ಯವಸ್ಥೆ ಸದೃಢವಾಗಿಸಲು ಮಹಿಳೆಯರ ಮತದಾನ ಪ್ರಮುಖವಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ವೀಪ್ ನೋಡಲ್ ಅಧಿಕಾರಿ ನಾಗೇಶ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ ಇದ್ದರು.

ಉರ್ಡಿಗೆರೆಯಲ್ಲಿ ವಿವಿ ಪ್ಯಾಟ್ ಅರಿವು

ತುಮಕೂರು: ತಾಲ್ಲೂಕಿನ ಊರ್ಡಿಗೆರೆಯಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ನಾಗಣ್ಣ ಸೋಮವಾರ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು ‘ಈ ಯಂತ್ರದ ನೆರವಿನಿಂದ ನಾವು ಯಾರಿಗೆ ಮತ ಚಲಾಯಿಸಿದ್ದೇವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬಹುದು’ ಎಂದರು.

ಸಾರ್ವಜನಿಕರಲ್ಲಿ ಮತಯಂತ್ರ ಹಾಗೂ ಮತಖಾತ್ರಿ ಯಂತ್ರದ ಬಗ್ಗೆ ಇರುವ ಗೊಂದಲ ನಿವಾರಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ. ಸಾರ್ವಜನಿಕರು ತಮ್ಮ ಗೊಂದಲ ನಿವಾರಿಸಿಕೊಳ್ಳಬಹುದು ಎಂದು ತಿಳಿಸಿದರು.ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಇಂದು ರಾಜಕೀಯ ಪಕ್ಷಗಳ ಸಭೆ

ತುಮಕೂರು: ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ನಿರ್ವಹಣೆ ಹಾಗೂ ಇವಿಎಂ, ವಿವಿ ಪ್ಯಾಟ್ ಬಗ್ಗೆ ಅರಿವು ಮೂಡಿಸಲು ಏ.10ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಪಿ.ಮೋಹನ್ ರಾಜ್ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.