ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಸ್ಟರಿಂಗ್, ಡಿಮಸ್ಟರಿಂಗ್‍ಗೆ ಅಚ್ಚುಕಟ್ಟು ವ್ಯವಸ್ಥೆ’

Last Updated 12 ಏಪ್ರಿಲ್ 2018, 9:47 IST
ಅಕ್ಷರ ಗಾತ್ರ

ಕೊಪ್ಪಳ: ‘ಈ ಬಾರಿಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಯ ಅಧಿಕಾರಿ, ಸಿಬ್ಬಂದಿಗೆ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್‍ಗಾಗಿ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆ ಒದಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿಧಾನಸಭೆ ಚುನಾವಣೆಯನ್ನು ಯಶಸ್ವಿಯಾಗಿ ಕೈಗೊಳ್ಳಲು ಶಿಕ್ಷಣ ಇಲಾಖೆಯಿಂದಲೇ ಅತಿ ಹೆಚ್ಚು ನೌಕರರು ತೊಡಗಿಕೊಳ್ಳಲಿದ್ದಾರೆ. ಅತಿ ಹೆಚ್ಚು ನೌಕರರನ್ನು ಹೊಂದಿರುವ ಶಿಕ್ಷಣ ಇಲಾಖೆ ಚುನಾವಣೆ ಪ್ರಕ್ರಿಯೆಗೆ ಸಿಂಹಪಾಲು ಒದಗಿಸಲಿದೆ. ಹೀಗಾಗಿ ಶಿಕ್ಷಣ ಇಲಾಖೆಯ ಎಲ್ಲ ಹಂತದ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ’ ಎಂದು ಹೇಳಿದರು.

‘ಏಪ್ರಿಲ್‌ 22ರಂದು ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ಸಾಮಾನ್ಯವಾಗಿ ಮತಗಟ್ಟೆ ಅಧಿಕಾರಿಗಳ ಪಾತ್ರ ಶಿಕ್ಷಣ ಇಲಾಖೆಯ ನೌಕರರೇ ನಿರ್ವಹಿಸುವುದು ಹೆಚ್ಚು. ಹೀಗಾಗಿ ಮೂರು ಹಂತಗಳಲ್ಲಿ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದರು.

‘ಈ ಬಾರಿಯ ಮಸ್ಟರಿಂಗ್, ಡಿಮಸ್ಟರಿಂಗ್ ಕಾರ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ಅಚ್ಚುಕಟ್ಟಾಗಿ ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಮತಗಟ್ಟೆಗೆ ತೆರಳುವ ಅಧಿಕಾರಿ, ಸಿಬ್ಬಂದಿಗಳಿಗೆ ಅಗತ್ಯ ವ್ಯವಸ್ಥೆ ಒದಗಿಸಲಾಗುವುದು. ಮತದಾನ ಕಾರ್ಯ ಸುಲಲಿತವಾಗಿ ನಡೆಸಲು, ಚುನಾವಣಾ ಆಯೋಗದ ನಿಯಮ ಹಾಗೂ ನಿರ್ದೇಶನಗಳನ್ನು ಎಲ್ಲ ಅಧಿಕಾರಿ, ಸಿಬ್ಬಂದಿ ಅರಿತು ಅದರ ಅನ್ವಯ ನಿಯಮ ಪಾಲನೆ ಮಾಡಬೇಕು. ಯಶಸ್ವಿ ಚುನಾವಣೆಗೆ ತಮ್ಮೆಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಇವಿಎಂ ಮತದಾನ ಯಂತ್ರ ಹಾಗೂ ವಿವಿ ಪ್ಯಾಟ್ ಕಾರ್ಯ ಚಟುವಟಿಕೆ ಹಾಗೂ ನಿರ್ವಹಣೆ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಿದರು.

ಕುಷ್ಟಗಿ ಕ್ಷೇತ್ರ ಚುನಾವಣಾಧಿಕಾರಿ ಪ್ರಶಾಂತ್, ಶಿಕ್ಷಣ ಇಲಾಖೆಯ ಡಿಡಿಪಿಐ ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT