ಪಕ್ಷ ತೊರೆಯುವ ಚಿಂತನೆ ನಡೆಸಿಲ್ಲ: ಸುದರ್ಶನ್‌

ಶುಕ್ರವಾರ, ಮಾರ್ಚ್ 22, 2019
29 °C

ಪಕ್ಷ ತೊರೆಯುವ ಚಿಂತನೆ ನಡೆಸಿಲ್ಲ: ಸುದರ್ಶನ್‌

Published:
Updated:
ಪಕ್ಷ ತೊರೆಯುವ ಚಿಂತನೆ ನಡೆಸಿಲ್ಲ: ಸುದರ್ಶನ್‌

ಬೆಂಗಳೂರು: ‘ಕೋಲಾರ ವಿಧಾನಸಭಾ ಕ್ಷೇತ್ರದಿಂದ ನನಗೆ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ್ದರೂ, ಸದ್ಯಕ್ಕಂತೂ ಪಕ್ಷ ತೊರೆಯುವ ಚಿಂತನೆ ನಡೆಸಿಲ್ಲ’ ಎಂದು ಕಾಂಗ್ರೆಸ್‌ ಮುಖಂಡ ವಿ.ಆರ್‌.ಸುದರ್ಶನ್‌ ಸ್ಪಷ್ಟಪಡಿಸಿದರು.

ತಮಗೆ ಟಿಕೆಟ್‌ ಸಿಗುವುದಿಲ್ಲ ಎಂಬ ಸುಳಿವು ಸಿಗುತ್ತಿದ್ದಂತೆಯೇ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸುದರ್ಶನ್‌ ರಾಜೀನಾಮೆ ಸಲ್ಲಿಸಿದ್ದರು.

‘ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದವರನ್ನು ಕಡೆಗಣಿಸುವ ಪ್ರವೃತ್ತಿಗೆ ವಿರೋಧ ಸೂಚಿಸುವ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ. ಇಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದು ಎಚ್ಚರಿಕೆ ನೀಡುವುದಷ್ಟೇ ನನ್ನ ಉದ್ದೇಶವಾಗಿತ್ತು’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ರಾಜೀನಾಮೆ ನೀಡಿದ ಬಳಿಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಲೀ, ಪಕ್ಷದ ಇತರ ಮುಖಂಡರಾಗಲೀ ನನ್ನ ಜೊತೆ ಚರ್ಚಿಸಿಲ್ಲ. ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಕಾಂಗ್ರೆಸ್‌ನ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾ ರೆಡ್ಡಿ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ’ ಎಂದರು.

‘ಕೋಲಾರ ಹೊರತುಪಡಿಸಿ ಬೇರೆ ಕ್ಷೇತ್ರದಲ್ಲಿ ಟಿಕೆಟ್‌ಗೆ ಬೇಡಿಕೆ ಸಲ್ಲಿಸಿಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಭೇಟಿಯಾಗಿದ್ದೇನೆ. ಅವರ ಸಲಹೆಗಳನ್ನು ಆಧರಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಹೇಳಿದರು.

ಸುದರ್ಶನ್‌ 1988ರಿಂದ 2012ರವರೆಗೆ ಸತತ ನಾಲ್ಕು ಅವಧಿಗೆ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಉಪಸಭಾಪತಿ ಹಾಗೂ ಸಭಾಪತಿ ಹುದ್ದೆಗಳನ್ನೂ ಅಲಂಕರಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry