ಮಂಗಳವಾರ, ಡಿಸೆಂಬರ್ 10, 2019
23 °C

ಮುಂದುವರಿದ ಆಕ್ರೋಶ; ಮನವೊಲಿಸಲು ಮುಂದಾದ ನಾಯಕರು

Published:
Updated:
ಮುಂದುವರಿದ ಆಕ್ರೋಶ; ಮನವೊಲಿಸಲು ಮುಂದಾದ ನಾಯಕರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪ್ರಕಟಿಸುತ್ತಿದ್ದಂತೆ ಎರಡೂ ಪಕ್ಷಗಳಲ್ಲಿ ಭುಗಿಲೆದ್ದಿರುವ ಅಸಮಾಧಾನ ಮಂಗಳವಾರವೂ ಕೆಲವೆಡೆ ಮುಂದುವರಿದಿದೆ. ಉಭಯ ಪಕ್ಷಗಳ ನಾಯಕರು ಅತೃಪ್ತರನ್ನು ಮನವೊಲಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.

ಕಾಂಗ್ರೆಸ್‌ ಟಿಕೆಟ್ ಕೈತಪ್ಪಿರುವ ಸಿರಗುಪ್ಪ ಶಾಸಕ ಬಿ.ಎಂ. ನಾಗರಾಜು ಮತ್ತು ಹಾನಗಲ್‌ ಶಾಸಕ ಮನೋಹರ ತಹಶೀಲ್ದಾರ್ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ತಡೆದು ಘೇರಾವ್‌ ಹಾಕಿದರು.

ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ಧಯ್ಯ ಅವರ ಕಾರು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು, ಹೊರ ಜಿಲ್ಲೆಯಿಂದ ಬಂದವರಿಗೆ ಪಕ್ಷ ಟಿಕೆಟ್ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಮೂಡುಬಿದಿರೆ ಕ್ಷೇತ್ರದ ಟಿಕೆಟ್ ನಿರಾಕರಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿ– ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಸಮಾಜದ ಮುಖಂಡ ಎಸ್.ಆರ್. ಮೋರೆ ಅವರಿಗೆ ಟಿಕೆಟ್ ಸಿಗದಿದ್ದರಿಂದ ಆಕ್ರೋಶಗೊಂಡ ಮರಾಠ ಸಮುದಾಯದ ಕಾರ್ಯಕರ್ತರು, ಪಕ್ಷದ ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಹುಬ್ಬಳ್ಳಿ– ಧಾರವಾಡ ಪಾಲಿಕೆ ಸದಸ್ಯ ದೀಪಕ ಚಿಂಚೋರೆ, ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ‘ಟಿಕೆಟ್ ಕೈತಪ್ಪಲು ವಿನಯ ಕಾರಣ. ಹೀಗಾಗಿ ಅವರ ವಿರುದ್ಧವೇ ಸ್ಪರ್ಧಿಸುತ್ತೇನೆ’ ಎಂದೂ ಗುಡುಗಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ನವಲಗುಂದ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಜಗಳೂರು ಶಾಸಕ ಎಚ್.ಪಿ. ರಾಜೇಶ್‌ ಅವರಿಗೇ ಟಿಕೆಟ್‌ ನೀಡಬೇಕೆಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸದ ಎದುರು ಬೆಂಬಲಿಗರು ಪ್ರತಿಭಟನೆ ನಡೆಸಿದರು. ಕೂಡ್ಲಿಗಿಯಲ್ಲಿ ಗುಜ್ಜಲ್ ರಘು ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿದರು.

ಮೊಳಕಾಲ್ಮುರು ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ತಿಪ್ಪೇಸ್ವಾಮಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿದರು.

‘ಈ ಸಂದರ್ಭದಲ್ಲಿ ಟಿಕೆಟ್‌ ಕೊಡಿಸುವುದು ಕಷ್ಟ. ಅಲ್ಲಿ ಡಾ. ಬಿ.ಯೋಗೇಶ್‌ ಬಾಬು ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಗೆಲ್ಲುವ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಬಿಜೆಪಿಯಲ್ಲೂ ನಾಟಕೀಯ ಬೆಳವಣಿಗೆ

ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಆಕ್ರೋಶಗೊಂಡಿರುವ ರವಿಕಾಂತ ಪಾಟೀಲ ಅವರು ಇಂಡಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಅಲ್ಲದೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ದೇವರಹಿಪ್ಪರಗಿ ಕ್ಷೇತ್ರದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮುದ್ದೇಬಿಹಾಳ ಕ್ಷೇತ್ರದ ಮಂಗಳಾದೇವಿ ಬಿರಾದಾರ ಬಿಜೆಪಿ ತೊರೆದಿದ್ದು, ಜೆಡಿಎಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.

ಉದ್ಯಮಿ ಸಂಗಮೇಶ ನಿರಾಣಿ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಆಗ್ರಹಿಸಿ ಬೆಂಬಲಿಗರು ಜಮಖಂಡಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬೆಂಬಲಿಗರಲ್ಲಿ ಕೆಲವರು ಬಹುಮಹಡಿ ಕಟ್ಟಡದಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಹಾಗೂ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದ ನಾಟಕೀಯ ಬೆಳವಣಿಗೆಯೂ ನಡೆಯಿತು.

ಯಲ್ಲಾಪುರ- ಮುಂಡಗೋಡ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಎಲ್.ಟಿ. ಪಾಟೀಲ ಅವರ ಬೆಂಬಲಿಗರು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಮನೆ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಕ್ರಿಯಿಸಿ (+)