ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಮಾತು ತಪ್ಪಿದ ಮುಖ್ಯಮಂತ್ರಿ

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಆರೋಪ
Last Updated 8 ಮೇ 2018, 9:59 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಸಂವಿಧಾನಾತ್ಮಕವಾದ ಯಾವುದೇ ಕಾಯ್ದೆಯನ್ನು ಜಾರಿ ಮಾಡಿಲ್ಲ. ಅವರು ನಿಷ್ಪ್ರಯೋಜಕ, ವಚನಭ್ರಷ್ಟ ಮುಖ್ಯಮಂತ್ರಿ’ ಎಂದು ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬದ್ಧತೆ ತೋರದೆ ಡೋಂಗಿ ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಜನರ ಅಭಿಮಾನವನ್ನು ತಮ್ಮ ರಾಜಕೀಯ ಬೆಳೆವಣಿಗೆಗೆ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅವರದು ಬರೀ ಮೂಗಿಗೆ ಬೆಣ್ಣೆ ಹಚ್ಚುವ ಕೆಲಸ’ ಎಂದು ಟೀಕಿಸಿದರು.

‘ಇವತ್ತು ನಾವು ಈ ಹಿಂದೆ ಯಡಿಯೂರಪ್ಪ ಅವರು ಕೊಟ್ಟಿರುವ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಧಾನಿ ಮೋದಿ ಅವರ ಜನಪರ ಕಾರ್ಯಕ್ರಮಗಳು ಮತ್ತು ಸಿದ್ದರಾಮಯ್ಯ ಅವರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ನಮ್ಮ ಪಕ್ಷ ಗೆಲ್ಲುವುದಕ್ಕೆ ಸಾಕಷ್ಟು ಅವಕಾಶಗಳಿವೆ’ ಎಂದು ಹೇಳಿದರು.

‘ಈ ಕ್ಷೇತ್ರದಲ್ಲಿ ಜನಾಸಾಮಾನ್ಯರಿಗೆ ಸ್ಪಂದಿಸದ ಹೈಟೆಕ್ ಶಾಸಕರಿದ್ದಾರೆ. ನಮ್ಮ ಅಭ್ಯರ್ಥಿ ಸರಳಜೀವಿಯಾಗಿದ್ದು, ಜನರಿಗೆ ಸುಲಭವಾಗಿ ದೊರೆಯುತ್ತಾರೆ. ಈ ಜಿಲ್ಲೆಗೆ ಯಡಿಯೂರಪ್ಪ ಅವರ ಅವಧಿಯಲ್ಲಿ ಎತ್ತಿನಹೊಳೆ ಯೋಜನೆ ನೀಡಿದರು. ಆದರೆ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆ ಯೋಜನೆ ಯಾವ ಹಂತದಲ್ಲಿದೆ ಎಂದು ಹೇಳುವ ಯೋಗ್ಯತೆ ಶಾಸಕರು, ಸಂಸದರು, ಸರ್ಕಾರಕ್ಕೆ ಇಲ್ಲ. ಇದು ವಚನಭ್ರಷ್ಟ ಸರ್ಕಾರ’ ಎಂದು ದೂರಿದರು.

‘ಬಿಜೆಪಿ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಭವನ, ತಾಲ್ಲೂಕು ಕಚೇರಿ, ಜಿಲ್ಲಾ ಆಸ್ಪತ್ರೆ, ಮೆಗಾ ಡೇರಿ, ಬಸ್ ನಿಲ್ದಾಣ ಮಂಜೂರು ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಈ ಜಿಲ್ಲೆಗೆ ಏನು ಮಂಜೂರು ಮಾಡಿದೆ ಹೇಳಲಿ? ಅಭಿವೃದ್ಧಿಯಲ್ಲಿ ಈ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.

‘ಪ್ರಕೃತಿ ವಿಕೋಪ ನಿರ್ವಹಣೆ ಕೇಂದ್ರ ಸರ್ಕಾರ ಸರಿಯಾಗಿ ಅನುದಾನದ ನೀಡಲಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ. ಈ ಹಿಂದೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ರಾಜ್ಯಕ್ಕೆ ನೀಡಿದ್ದು ₹ 83 ಸಾವಿರ ಕೋಟಿ, ಮೋದಿ ಅವರು ಕಳೆದ 3 ವರ್ಷಗಳಲ್ಲಿ ರಾಜ್ಯಕ್ಕೆ ₹3.05 ಲಕ್ಷ ಕೋಟಿ ನೀಡಿದ್ದಾರೆ’ ಎಂದು ಹೇಳಿದರು.

‘ಮುದ್ರಾ ಯೋಜನೆಯಲ್ಲಿ ರಾಜ್ಯದ ಫಲಾನುಭವಿಗಳಿಗೆ ₹47 ಸಾವಿರ ಕೋಟಿ ಸಾಲ ನೀಡಲಾಗಿದೆ. ಉಜ್ವಲ ಯೋಜನೆ ಅಡಿ 2.16 ಲಕ್ಷ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ವಿತರಿಸಲಾಗಿದೆ. ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿತು. ಇದನ್ನು ಕಾಗೋಡು ತಿಮ್ಮಪ್ಪ ಅವರೇ ಅಧಿವೇಶನದಲ್ಲಿ ಒಪ್ಪಿಕೊಂಡಿದ್ದಾರೆ. ಸ್ಮಾರ್ಟ್ ಸೀಟಿ ಯೋಜನೆಯಡಿ ಕೇಂದ್ರ ನೀಡಿದ ಸಾವಿರಾರು ಕೋಟಿ ಈವರೆಗೆ ಬಳಕೆಯಾಗಿಲ್ಲ’ ಎಂದು ಆರೋಪಿಸಿದರು.

‘ಸಿದ್ದರಾಮಯ್ಯ ಅವರು ಹೇಳಿಕೊಳ್ಳುವ ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರ ಬರೀ ₹3 ನೀಡುತ್ತದೆ. ಕೇಂದ್ರ ₹29 ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 84 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡಿದೆ. ಅದರಲ್ಲಿ ಶೇ25 ರಷ್ಟು ಬಳಕೆ ಮಾಡಿಲ್ಲ’ ಎಂದು ಅವರು ಆರೋಪಿಸಿದರು.

‘ಲಕ್ಷಾಂತರ ಟನ್ ಅಕ್ಕಿ, ಗೋದಿ ಗೋದಾಮುಗಳಲ್ಲಿ ಕೊಳೆಯುತ್ತಿವೆ. ಜತೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ’ ಎಂದು ಅವರು ಟೀಕಿಸಿದರು.

ಕೊಟ್ಟ ಮಾತಿಗೆ ತಪ್ಪಿದ ಸಿದ್ದರಾಮಯ್ಯ

‘ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ತಕ್ಷಣವೇ ಬಡವರು, ದುರ್ಬಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಿ ಸಂವಿಧಾನಬದ್ಧ ಮೀಸಲಾತಿ ನೀಡುತ್ತೇನೆ ಎಂದು ಹೇಳಿದ್ದರು. ಆ ಸಮಿಕ್ಷೆಯ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿ ಎರಡು ವರ್ಷಗಳಾಗುತ್ತ ಬಂದರೂ ಈವರೆಗೆ ವರದಿ ಬಹಿರಂಗಪಡಿಸಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ ಮುಖ್ಯಮಂತ್ರಿ ಎನ್ನುವುದಕ್ಕೆ ಇದೇ ಸಾಕ್ಷಿ. ಕೈಲಾಗದ ಮುಖ್ಯಮಂತ್ರಿಗೆ ಹಿಂದುಳಿದವರ ಪರವಾಗಿದ್ದೇನೆ ಎಂದು ಹೇಳಿಕೊಳ್ಳಲು ನಾಚಿಕೆಯಾಗಬೇಕು’ ಎಂದು ಪುಟ್ಟಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

‘ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. 3,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 7,002 ಕೊಲೆಗಳಾಗಿವೆ. ಕೆರಳದಿಂದ ಬಂದು ಹಿಂದೂಗಳ ಕತ್ತು ಕತ್ತರಿಸುವವರಿಗೆ ಇವರು ಸಮಾವೇಶ ಮಾಡಲು ಜಾಗ ನೀಡುತ್ತಾರೆ. ಭಾರತದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದ್ದಾರೆ. ಅದರ ಪ್ರಾರಂಭ ಈ ರಾಜ್ಯದಲ್ಲಿ ಆಗುತ್ತಿದೆ. ಲವ್ ಜಿಹಾದ್ ಹೆಸರಿನಲ್ಲಿ ರಾಜ್ಯದಲ್ಲಿ 4,759 ಹೆಣ್ಣು ಮಕ್ಕಳನ್ನು ಅಪಹರಿಸಿಕೊಂಡು ಹೋಗಲಾಗಿದೆ. ಕೆಂಪಯ್ಯ ಅಂತಹವರಿಗೆ ಕೈಗೆ ಗೃಹ ಇಲಾಖೆ ನೀಡಿ ಸರ್ಕಾರ ನಿರ್ಲಿಪ್ತವಾಗಿದೆ. 25,029ರ ಮಹಿಳೆಯರ ಮೇಲೆ ಅತ್ಯಾಚಾರವಾಗಿದೆ. 1.24 ಲಕ್ಷ ಅಪರಾಧ ಪ್ರಕರಣಗಳು ದಾಖಲಾಗಿವೆ. ಇದೊಂದು ಗೂಂಡಾ ಸರ್ಕಾರ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT