ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಷುಗರ್‌ ಮುಚ್ಚಲು ಹುನ್ನಾರ: ವಿಜಯೇಂದ್ರ

Last Updated 8 ಮೇ 2018, 13:46 IST
ಅಕ್ಷರ ಗಾತ್ರ

ಮಂಡ್ಯ: ‘ಕಾಂಗ್ರೆಸ್‌ ಸರ್ಕಾರ ರೈತರಿಗೆ ಸುಳ್ಳು ಭರವಸೆ ನೀಡುತ್ತಿದೆ. ಜಿಲ್ಲೆಯ ಜೀವನಾಡಿಯಾಗಿರುವ ಮೈಷುಗರ್‌ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ ಯಾವುದೇ ಸಹಾಯ ಮಾಡಿಲ್ಲ. ಆ ಮೂಲಕ ಸರ್ಕಾರಿ ಕಾರ್ಖಾನೆಯನ್ನು ಮುಚ್ಚಲು ಹುನ್ನಾರ ಮಾಡುತ್ತಿದೆ’ ಎಂದು ಬಿಜೆಪಿ ಮುಖಂಡ ಬಿ.ವೈ.ವಿಜಯೇಂದ್ರ ಹೇಳಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಹಳ್ಳಿ ಪುರದಲ್ಲಿ ಸೋಮವಾರ ನಡೆದ ಬಿಜೆಪಿ ಅಭ್ಯರ್ಥಿ ಕೆ.ಎಸ್.ನಂಜುಂಡೇಗೌಡ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿದ ಬಿ.ಎಸ್‌.ಯಡಿಯೂರಪ್ಪ ಅವರು ರೈತರಿಗೆ ಹಲವು ಯೋಜನೆ ರೂಪಿಸಿದ್ದಾರೆ. ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ ಯೋಜನೆ ಸೇರಿ ಹಲವು ಯೋಜನೆಗಳನ್ನು ಬಡವರ, ದಲಿತರ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಅನುಕೂಲಕ್ಕಾಗಿ ಜಾರಿಗೊಳಿಸಿದ್ದಾರೆ’ ಎಂದರು.

‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ 48 ಗಂಟೆಗಳ ಒಳಗಾಗಿ ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲದಲ್ಲಿ ಒಂದು ಲಕ್ಷದವರೆಗೆ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಮಂಡ್ಯದ ಮೈಷುಗರ್‌ ಕಾರ್ಖಾನೆ ಹಾಗೂ ಪಾಂಡವಪುರದ ಸಹಕಾರಿ ಸಕ್ಕರೆ ಕಾರ್ಖಾನೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದರು. ಮುಂದೆಯೂ ಕಾರ್ಖಾನೆ ಪುನಶ್ಚೇತನಕ್ಕೆ ಕೊಡುಗೆ ನೀಡುವರು’ ಎಂದು ಹೇಳಿದರು.

‘ಸಮೀಕ್ಷೆಗಳ ಪ್ರಕಾರ ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂಬ ವರದಿ ಇದೆ. ಮತದಾರರು ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷ ಸರ್ಕಾರ ರಚಿಸುವಂತೆ ಮಾಡಿ ರಾಜ್ಯದ ಅಭಿವೃದ್ಧಿ ಪರ್ವಕ್ಕೆ ಚಾಲನೆ ನೀಡಬೇಕು. ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯಲ್ಲಿ ಹುಟ್ಟಿದರೂ ಶಿವಮೊಗ್ಗದಲ್ಲಿ ಸೇವೆ ಮಾಡಿ ಹೆಸರು ಹಾಗೂ ಕೀರ್ತಿ ಗಳಿಸಿದ್ದಾರೆ. ಆದರೆ ತವರು ಜಿಲ್ಲೆಯ ಸೇವೆ ಮಾಡುವ ತುಡಿತ ಅವರಿಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಅವರಿಗೆ ಅವಕಾಶ ನೀಡಬೇಕು’ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಕೆ.ಎಸ್.ನಂಜುಂಡೇಗೌಡ, ಮುಖಂಡರಾದ ತೇಜಶ್ವಿನಿ ರಮೇಶ್‌, ಅಪ್ಪಣ್ಣ, ಶ್ರೀಧರ್, ಹನಿಯಂಬಾಡಿ ನಾಗರಾಜ್, ಪೀಹಳ್ಳಿ ರಮೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT