7

ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರದಲ್ಲೇ ಸಾಲ ಮನ್ನಾ: ಯಡಿಯೂರಪ್ಪ

Published:
Updated:
ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರದಲ್ಲೇ ಸಾಲ ಮನ್ನಾ: ಯಡಿಯೂರಪ್ಪ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿರುವಂತೆ ರಾಷ್ಟ್ರೀಕೃತ ಬ್ಯಾಂಕ್, ನೇಕಾರರ ಸಂಘ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ₹1 ಲಕ್ಷದವರೆಗಿನ ಬೆಳೆ ಸಾಲ ಮನ್ನಾ ಶೀಘ್ರದಲ್ಲೇ ಘೋಷಣೆ ಮಾಡಲಿದ್ದೇನೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಸಿದ ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ವಿಷಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಮುಖ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಅವುಗಳ ಪರಿಶೀಲನೆ ನಡೆಸಿ ಸಾಲ ಮನ್ನಾ ಘೋಷಣೆ ನಿರ್ಧಾರ ಕೈಗೊಳ್ಳಳಿದ್ದೇನೆ ಎಂದು ಭರವಸೆ ನೀಡಿದರು.

‘ರಾಜ್ಯದ 6.5 ಕೋಟಿ ಜನತೆಗೆ ಹೃದಯಪೂರ್ವಕ ಕೃತಜ್ಞತೆಗಳು. ಜನರ ಬೆಂಬಲ ಬಿಜೆಪಿ ಮತ್ತು ನನ್ನ ಪರ ಇದ್ದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಅನೈತಿಕವಾಗಿ ಚುನಾವಣಾ ನಂತರ ಅಕ್ರಮ ಮೈತ್ರಿ ಮಾಡಲು ಯತ್ನಿಸುತ್ತಿವೆ. ಆದರೆ, ಜನರ ಬೆಂಬಲ ನನ್ನ ಮತ್ತು ನನ್ನ ಪಕ್ಷದ ಪರ ಇದೆ. ನೂರಕ್ಕೆ ನೂರು ಯಶಸ್ಸು ಕಾಣುತ್ತೇನೆ ಎಂಬ ವಿಶ್ವಾಸವಿದೆ’ ಎಂದು ಯಡಿಯೂರಪ್ಪ ಹೇಳಿದರು.

ಜೆಡಿಎಸ್, ಕಾಂಗ್ರೆಸ್‌ನಲ್ಲಿ ಜನಾದೇಶವನ್ನು ಒಪ್ಪುವ ಬಹಳಷ್ಟು ಶಾಸಕರಿದ್ದಾರೆ. ಅವರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಬೆಂಬಲ ನೀಡಬೇಕು ಎಂದು ಕೋರುತ್ತೇನೆ. ಅವರು ಬೆಂಬಲ ನೀಡುವ ವಿಶ್ವಾಸವಿದೆ ಎಂದೂ ಅವರು ಹೇಳಿದರು.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಕಾರಣ ವಿಶ್ವಾಸಮತ ವಿಚಾರವಾಗಿ ಮಾತನಾಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೂ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry