ಕಾರವಾರ ಶೈಕ್ಷಣಿಕ ಜಿಲ್ಲೆಗೆ 5 ‘ಕರ್ನಾಟಕ ಪಬ್ಲಿಕ್ ಶಾಲೆ’

7
‘ಒಂದೇ ಸೂರಿನಡಿ ಶಿಕ್ಷಣ’ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ

ಕಾರವಾರ ಶೈಕ್ಷಣಿಕ ಜಿಲ್ಲೆಗೆ 5 ‘ಕರ್ನಾಟಕ ಪಬ್ಲಿಕ್ ಶಾಲೆ’

Published:
Updated:

ಕಾರವಾರ: 2018- 19ರ ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ‘ಒಂದೇ ಸೂರಿನಡಿ ಶಿಕ್ಷಣ’ ಯೋಜನೆ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಅದರಂತೆ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಐದು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು ತೆರೆಯಲು ಯೋಜನೆ ಸಿದ್ಧಗೊಂಡಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಇದನ್ನು ಘೋಷಿಸಿದ್ದರು. 100 ಸಂಯೋಜಿತ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು ₹ 5 ಕೋಟಿ (ಪ್ರತಿ ಶಾಲೆಗೆ ₹ 5 ಲಕ್ಷಗಳಂತೆ) ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಪ್ರಕಟಿಸಿದ್ದರು.

ಅದರಂತೆ ಕಾರವಾರ ಶೈಕ್ಷಣಿಕ ಜಿಲ್ಲೆಯ ಪ್ರತಿ ತಾಲ್ಲೂಕಿಗೆ ಒಂದರಂತೆ ಈ ಶಾಲೆಗಳನ್ನು ತೆರೆಯಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಈ ಶೈಕ್ಷಣಿಕ ವರ್ಷದಿಂದಲೇ ಅವು ಕಾರ್ಯಾರಂಭ ಮಾಡಲಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇನ್ನು ಮುಂದೆ ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪದವಿಪೂರ್ವ ಕಾಲೇಜಿನವರೆಗೆ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ.

ಏನಿದರ ವಿಶೇಷ?: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಈ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲೇ ಈ ಶಾಲೆಗಳು ಪ್ರಾರಂಭಗೊಳ್ಳಲಿವೆ. ಈ ಶಾಲೆಗಳಲ್ಲಿ ಆಯಾ ಹಂತದ ಮಕ್ಕಳಿಗೆ ಉತ್ತಮ ಕೊಠಡಿ, ಸುಸಜ್ಜಿತ ಪ್ರಯೋಗಾಲಯ, ಕಂಪ್ಯೂಟರ್ ಶಿಕ್ಷಣ, ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ’ ಎಂದು ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಪಿ.ಕೆ.ಪ್ರಕಾಶ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಎಲ್ಲೆಲ್ಲಿ?: ಕಾರವಾರ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಐದು ತಾಲ್ಲೂಕುಗಳಲ್ಲಿ ಶಾಲೆಗಳು ಪ್ರಾರಂಭಗೊಳ್ಳಲಿದೆ. ಭಟ್ಕಳದ ತೆರ್ನಮಕ್ಕಿ, ಹೊನ್ನಾವರ ಮಂಕಿ, ಕುಮಟಾದ ಬಾಡ, ಅಂಕೋಲಾದ ಅಗಸೂರು ಹಾಗೂ ಕಾರವಾರದ ಶಿರವಾಡದಲ್ಲಿ

ಶಾಲೆಗಳು ಆರಂಭವಾಗಲಿವೆ’ ಎಂದು ಶಿಕ್ಷಣ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದರು.

**

ಪಬ್ಲಿಕ್ ಶಾಲೆಗಳನ್ನು ತೆರೆಯುವ ಸಂಬಂಧ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ ಅವರು ಮಂಗಳವಾರ ವಿಡಿಯೊ ಸಂವಾದದಲ್ಲಿ ಭಾಗಿಯಾಗಲಿದ್ದಾರೆ

- ಪಿ.ಕೆ.ಪ್ರಕಾಶ, ಕಾರವಾರ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ        

-ದೇವರಾಜ ನಾಯ್ಕ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry