4

ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಚರ್ಚೆ

Published:
Updated:
ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ರಾತ್ರಿ ಸಭೆ ನಡೆಸಿದರು.

ರೈತರ ಸಾಲ ಮನ್ನಾಕ್ಕೆ ವಿರೋಧ ಪಕ್ಷ ಬಿಜೆಪಿ ಗಡುವು ವಿಧಿಸಿದ ಬೆನ್ನಲ್ಲೆ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌ ಮತ್ತು ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್‌ ಝಾ ಜೊತೆ ಚರ್ಚಿಸಿದ ಕುಮಾರಸ್ವಾಮಿ, ರಾಜ್ಯ ಆರ್ಥಿಕ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.

ತೆರಿಗೆ ಸಂಗ್ರಹ, ಸಂಪನ್ಮೂಲ ಕ್ರೋಡೀಕರಣ, ಜಿಎಸ್‌ಟಿ ಪರಿಣಾಮ ಮತ್ತಿತರ ವಿಷಯಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈತರ ₹ 53,000 ಕೋಟಿ ಸಾಲ ಮನ್ನಾ ಮತ್ತು ಕಾಂಗ್ರೆಸ್‌ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಮುಂದುವರಿಸಿದರೆ ಆರ್ಥಿಕ ಸ್ಥಿತಿ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆಯೂ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ.

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ತೀವ್ರಗೊಂಡಿದ್ದು, ಈ ಬಗ್ಗೆ ಕೇಂದ್ರ ಇಂಧನ ಸಚಿವ ಪೀಯೂಶ್‌ ಗೋಯಲ್‌ ಅವರ ಭೇಟಿಗೆ ಸಮಯ ಕೇಳಲಾಗಿದೆ. ಗೋಯಲ್‌ ಸಮಯ ನೀಡಿದರೆ ಕುಮಾರಸ್ವಾಮಿ ಶನಿವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.

**

ಕಾವೇರಿಗೆ ಭೇಟಿ ನೀಡದ ಶಿವಕುಮಾರ್‌

ಬೆಂಗಳೂರು: ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿಕೂಟ ಸರ್ಕಾರದಲ್ಲಿ ಹಂಚಿಕೆಯಾಗಿರುವ ಸಚಿವ ಸ್ಥಾನಗಳ ಹಂಚಿಕೆ ಸಂಬಂಧಿಸಿದಂತೆ ಕಾವೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ಭಾಗವಹಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಉಪ ಮುಖ್ಯಮಂತ್ರಿ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ. ಆದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನದ ಮೇಲೂ ಶಿವಕುಮಾರ್‌ ಕಣ್ಣಿಟ್ಟಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry