ಅನುದಾನ ಸದ್ಬಳಕೆಗೆ ಡಿ.ಸಿ ಸೂಚನೆ

7
ಮಳೆಯಿಂದ ಬೆಳೆ, ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಾಕೀತು

ಅನುದಾನ ಸದ್ಬಳಕೆಗೆ ಡಿ.ಸಿ ಸೂಚನೆ

Published:
Updated:

ವಿಜಯಪುರ: 14ನೇ ಹಣಕಾಸು ಆಯೋಗದಡಿ ಅಭಿವೃದ್ದಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಶೆಟ್ಟೆಣ್ಣವರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡದರು. ‘ಮಳೆಗಾಲ ಆರಂಭವಾಗಿದ್ದು, ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿ, ಸಾರ್ವಜನಿಕ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದರು.

ಮಳೆಯಿಂದ ಚರಂಡಿಗಳು ತುಂಬಿ ಮನೆಗೆ ನುಗ್ಗುವುದು. ಜನನಿಬಿಡ ಪ್ರದೇಶಗಳಲ್ಲಿ ಜನಸಂಚಾರಕ್ಕೆ ಅವ್ಯವಸ್ಥೆ ಉಂಟಾಗುವ ಸಾಧ್ಯತೆ ಇರಲಿದೆ. ಚರಂಡಿ ಹೂಳೆತ್ತುವುದು ಸೇರಿದಂತೆ ಅದರ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಸದ್ಬಳಕೆ ಮಾಡಿ, ದಾಖಲೆ, ಕಡತಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ಮಳೆಗಾಲದಲ್ಲಿ ಬೆಳೆಹಾನಿ, ಜೀವಹಾನಿ ಸಂಭವಿಸಿದರೆ ಘಟನಾ ಸ್ಥಳಕ್ಕೆ ತಹಶೀಲ್ದಾರರು ತಕ್ಷಣ ಭೇಟಿ ನೀಡಿ, ಸಂಬಂಧಿಸಿದ ಉಪವಿಭಾಗಾಧಿಕಾರಿಗೆ ವರದಿ ಸಲ್ಲಿಸಬೇಕು. ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕು. ಮುಂಗಾರು ಆರಂಭವಾಗಿರುವ ಕಾರಣ ತೊಗರಿ ಸೇರಿದಂತೆ ಬಿತ್ತನೆ ಬೀಜದಲ್ಲಿ ಕೊರತೆ ಉಂಟಾಗದಂತೆ ಕ್ರಮ

ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. ಅವಶ್ಯಕತೆ ಇರುವ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಟ್ಯಾಂಕರ್, ಶುದ್ಧ ಕುಡಿಯುವ ನೀರಿನ ಆರ್‌ಒ ಘಟಕಗಳ ಕುರಿತು ಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ದುರ್ಗೇಶ ರುದ್ರಾಕ್ಷಿ, ನಗರಾಭಿವೃದ್ದಿ ಕೋಶದ ಅಧಿಕಾರಿಗಳು, ವಿಜಯಪುರ ಉಪವಿಭಾಗಾಧಿಕಾರಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry