ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂಬಾಕಿನಿಂದ ಹಾನಿ: ಜನಜಾಗೃತಿ ಅಗತ್ಯ’

ರಾಮನಗರದಲ್ಲಿ ಜನಜಾಗೃತಿ ಜಾಥಾ: ಆರೋಗ್ಯ ತಪಾಸಣಾ ಶಿಬಿರ ಆಯೋಜನೆ
Last Updated 1 ಜೂನ್ 2018, 11:21 IST
ಅಕ್ಷರ ಗಾತ್ರ

ರಾಮನಗರ: ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸೆಷನ್‌ ನ್ಯಾಯಾಧೀಶ ಪ್ರಕಾಶ್ ನಾಡಿಗೇರ್ ಹೇಳಿದರು.

ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬಾಯಿ ಕ್ಯಾನ್ಸರ್ ಪತ್ತೆ ಹಚ್ಚುವಿಕೆಯ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ವಿವಿಧ ಬಗೆಗಳಲ್ಲಿ ತಯಾರಾಗುವ ತಂಬಾಕಿನ ಪ್ರಮಾಣ ಕಡಿಮೆಯಾದಲ್ಲಿ ಅದನ್ನು ಬೆಳೆಯುವ ಪ್ರಮಾಣ ಕಡಿಮೆ
ಯಾಗುತ್ತಾ ಹೋಗುತ್ತದೆ, ತಂಬಾಕು ಪದಾರ್ಥಗಳ ವ್ಯರ್ಜ ಉತ್ತಮ ಸಮಾಜಕ್ಕೆ ದಾರಿದೀಪ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಮಾತನಾಡಿ, ನಮ್ಮ ಹಣ ನಾವೇ ಖರ್ಚು ಮಾಡಿ ಒಂದಿಲ್ಲೊಂದು ರೀತಿಯ ತಂಬಾಕು ಸೇವಿಸಿ ವಿವಿಧ ಬಗೆಯ ರೋಗ ತಂದುಕೊಳ್ಳುತ್ತಿದ್ದೇವೆ. ಹೃದಯಘಾತ, ತಂಬಾಕಿನಿಂದ ಬಂದೆರಗುವ ಪ್ರಮುಖ ಕಾಯಿಲೆ.ಬಾಯಿ ಕ್ಯಾನ್ಸರ್‌ನ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ತಂಬಾಕು ಬಳಕೆಯಿಂದ ಬರುವ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿ
ಸಬೇಕು. ಅದಕ್ಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕ್ಯಾನ್ಸರ್ ಪೀಡಿತ ರೋಗಿಯಿಂದಲೇ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ತಿಳಿಸಿಕೊಡಲು ಕಾರ್ಯಾಗಾರ ಹಮ್ಮಿಕೊಳ್ಳಬೇಕು ಎಂದರು.

2009-–10ರಲ್ಲಿ ರಾಜ್ಯದಲ್ಲಿ ಶೇ 28 (15 ವರ್ಷಕ್ಕಿಂತ ಮೇಲ್ಪಟ್ಟ ) ವ್ಯಕ್ತಿಗಳು ಯಾವುದಾದರೂ ಒಂದು ರೀತಿಯ ತಂಬಾಕು ಉತ್ಪನ್ನ ಸೇವಿಸುತ್ತಿದ್ದರು. ಅದು 2017ರಲ್ಲಿ ಪ್ರತಿಶತ ಶೇ22 ಕ್ಕಿಳಿದಿದೆ. ಕೋಟ್ಪಾ ಕಾಯ್ದೆ ಹಾಗೂ ತಂಬಾಕು ಮತ್ತು ಅದರ ಉತ್ಪನ್ನಗಳಿಂದ ಆಗುವ ದುಷ್ಪರಿಣಾಮಗಳ ಅರಿವು ಸಾರ್ವಜನಿಕರಲ್ಲಿ ಮೂಡುತ್ತಿರುವುದರಿಂದ ತಂಬಾಕು ಮತ್ತು ಅದರ ಉತ್ಪನ್ನ ಸೇವಿಸುವವರ ಹಾಗೂ ಅದರಿಂದ ಬರುವ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಿ.ಎಸ್.ಹೊನ್ನಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರನಾಥ್, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ. ಆರ್‌.ಎನ್.ಲಕ್ಷ್ಮೀಪತಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿವೇಕ್ ದೊರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ಬಿ.ಕೆ.ವಿಜೇಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ವಿ. ಶಿವರಾಜು ಇದ್ದರು.

ಜಾಗೃತಿ ಜಾಥಾಗೆ ಚಾಲನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆಯ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಜಾಥಾಗೆ ಪ್ರಧಾನ ಜಿಲ್ಲಾ ಹಾಗೂ ಸೆಷನ್‌ ನ್ಯಾಯಾಧೀಶ ಪ್ರಕಾಶ್ ಎಲ್. ನಾಡಿಗೇರ್ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT