‘ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಿ’

7
ಗ್ರಾಮ ಪಂಚಾಯಿತಿ ಪಿಡಿಒಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕರೆ

‘ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಿ’

Published:
Updated:
‘ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಿ’

ಮಡಿಕೇರಿ: ನಾಪೋಕ್ಲು ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಸಮಸ್ಯೆ ಇರುವುದನ್ನು ಗಮನಿಸಿ ತುರ್ತಾಗಿ ನೀರು ಪೂರೈಕೆಗೆ ಕ್ರಮವಹಿಸುವಂತೆ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದರು.

ನಗರದ ಹಳೇ ಕೋಟೆ ವಿಧಾನ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಪಿಡಿಒಗಳ ಜತೆಗೆ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ಜಿಲ್ಲೆಯಲ್ಲಿ ಉತ್ತಮ ಮಳೆಯಾಗು ತ್ತಿದ್ದರೂ, ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಮತ್ತಿತರ ಕಾರಣಗಳಿಂದ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ. ಈ ಬಗ್ಗೆ  ಕಚೇರಿಗಳಿಗೆ ಸಾರ್ವಜನಿಕ ರಿಂದ ಸಾಕಷ್ಟು ದೂರುಗಳು ಬರುತ್ತಿರುವುದರಿಂದ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು. ಕುಡಿಯುವ ನೀರಿನ ಸಮಸ್ಯೆ ಹಾಗೂ ಬೇಡಿಕೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಶ್ರೀವಿದ್ಯಾ ಸೂಚಿಸಿದರು.

ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ವಹಿಸಿ: ‘ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ರಕ್ಷಕರು ಅವಶ್ಯಕತೆ ಇರುವಲ್ಲಿ ರಕ್ಷಕರನ್ನು ನಿಯೋಜಿಸಬೇಕು. ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಶುಚಿತ್ವಕ್ಕೆ ಒತ್ತು ನೀಡಬೇಕು. ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ಕೇಂದ್ರಗಳಲ್ಲಿ ವಾಹನ ನಿಲುಗಡೆ ಶುಲ್ಕವನ್ನು ಸಂಗ್ರಹಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ಪ್ರವಾಸಿ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಿರುವುದರಿಂದ ಅಧಿಕಾರಿ ಗಳು ಖುದ್ದು ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದರು.

ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಲೇವಾರಿ ಸಂಬಂಧ ಸರ್ಕಾರಿ ಜಾಗಗಳನ್ನು ಗುರುತಿಸುವಲ್ಲಿ ಕೆಲವು ಅಧಿಕಾರಿಗಳು ವಿಫಲರಾಗಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿ ವಾರ ಸ್ವಚ್ಛತಾ ದಿನ: ‘ಪಂಚಾಯಿತಿಯಲ್ಲಿ ಎನ್‌ಒಸಿ ನೀಡುವಾಗ ಪರಿಸರ ಸಂಬಂಧ ಷರತ್ತುಗಳನ್ನು ವಿಧಿಸಬೇಕು. ಗ್ರಾಮಸಭೆ ಆಹ್ವಾನಿಸಿ ಪರಿಸರ ಮಹತ್ವ ಬಗ್ಗೆ ಮನವರಿಕೆ ಮಾಡಬೇಕು. ಜಿಲ್ಲೆಯ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ವಾರ ಸ್ವಚ್ಛತಾ ದಿನ ಆಚರಣೆ ಮಾಡಬೇಕು’ ಎಂದು ಹೇಳಿದರು.

‘ಈಗಾಗಲೇ ಮುಂಗಾರು ಆರಂಭವಾಗಿದ್ದು, ಡೆಂಗೆ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು’ ಎಂದು ಶ್ರೀವಿದ್ಯಾ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಉಪ ಕಾರ್ಯದರ್ಶಿ ಬಾಬು, ತಾಲ್ಲೂಕು ಪಂಚಾಯಿತಿ ಇಒಗಳಾದ ಲಕ್ಷ್ಮಿ, ಚಟ್ಟಿಯಪ್ಪ, ಜಯಣ್ಣ, ಸ್ವಚ್ಚ ಭಾರತ್ ಅಭಿಯಾನದ ಸಮಾಲೋಚಕರಾದ ಸೂರಜ್, ಪೆಮ್ಮಯ್ಯ, ವಾಸುದೇವ ಹಾಜರಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry