ಖಾಸಗಿ ಶಾಲೆಗಳಲ್ಲಿ ‘ಸೇತುಬಂಧ’ ಕಡ್ಡಾಯ

7
ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ ಸೂಚನೆ

ಖಾಸಗಿ ಶಾಲೆಗಳಲ್ಲಿ ‘ಸೇತುಬಂಧ’ ಕಡ್ಡಾಯ

Published:
Updated:

ಯಾದಗಿರಿ: ‘ಸರ್ಕಾರದ ಆದೇಶದ ಪ್ರಕಾರ ಜಿಲ್ಲೆಯ 387 ಖಾಸಗಿ ಶಾಲೆಗಳಲ್ಲಿ ಪ್ರಸಕ್ತ ವರ್ಷದಿಂದಲೇ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್‌) ಕಡ್ಡಾಯವಾಗಿ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಖಾಸಗಿ ಅನುದಾನ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿ ಮತ್ತು ಮುಖ್ಯಗುರುಗಳಿಗೆ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜೂನ್‌ 30ರವರೆಗೆ ನಿತ್ಯ ಎರಡು ಅವಧಿಗೆ ಸೇತುಬಂಧ ತರಗತಿಗಳನ್ನು ಬೋಧನಾ ತರಗತಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಸಮಯ ಮೀಸಲಿಡಬೇಕು. ಇದರಿಂದ ಮಕ್ಕಳ ಕಲಿಕೆಯಲ್ಲಿ ಗುಣಮಟ್ಟವನ್ನು ಕಾಣಬಹುದು ’ ಎಂದರು.

‘ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕೆಳಮಟ್ಟದಲ್ಲಿದೆ. ಫಲಿತಾಂಶ ಸುಧಾರಣೆಗೆ ಏನು ಕ್ರಮ ವಹಿಸಬೇಕು ಎಂಬುದರ ಕುರಿತು ಈಗಾಗಲೇ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯರ ಸಭೆ ನಡೆಸಲಾಗಿದೆ. ಸರ್ಕಾರಿ ಶಾಲೆಗಳ ಜತೆಗೆ ಖಾಸಗಿ ಶಾಲೆಗಳು ಸಹ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಗುಣಮಟ್ಟದ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಪ್ರತಿ ವರ್ಷ 30 ಸಾವಿರ ವಿದ್ಯಾರ್ಥಿಗಳು ಪ್ರಾಥಮಿಕ ಶಾಲೆಗಳಿಗೆ ಪ್ರವೇಶ ಪಡೆಯುತ್ತಾರೆ. ಆದರೆ, 13 ಸಾವಿರ ವಿದ್ಯಾರ್ಥಿಗಳು ಮಾತ್ರ ಎಸ್ಸೆಸ್ಸೆಲ್ಸಿ ವರೆಗೆ ಅಭ್ಯಾಸ ಮಾಡುತ್ತಾರೆ. ಒಂದರಿಂದ 10ನೇ ತರಗತಿ ನಡುವೆ 17 ಸಾವಿರ ವಿದ್ಯಾರ್ಥಿಗಳು ಶಾಲೆ ಬಿಡುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಎಸ್ಸೆಸ್ಸೆಲ್ಸಿಯಲ್ಲಿ ಈ ಬಾರಿ 13 ಸಾವಿರ ಮಕ್ಕಳ ಪರೀಕ್ಷಾ ಫಲಿತಾಂಶ ಕೇವಲ ಶೇ 37ರಷ್ಟು ಆಗಿದೆ. ಈ ಫಲಿತಾಂಶ ತೃಪ್ತಿದಾಯಕವೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.

ಆರ್‌ಟಿಇ ಅನುದಾನ ಇಲ್ಲ: ಜಿಲ್ಲೆಯಲ್ಲಿ 2016-17 ಹಾಗೂ 2017-18ನೇ ಸಾಲಿನಲ್ಲಿ ಆರ್‌ಟಿಇ ಅಡಿ ಪ್ರವೇಶ ನೀಡಿದ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದ ಬರಬೇಕಾದ ಅನುದಾನ ಇದುವರೆಗೂ ಬಂದಿಲ್ಲ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಕೆಲವರು ಜಿಲ್ಲಾಧಿಕಾರಿ ಎದುರು ಅಳಲು ತೋಡಿಕೊಂಡರು.

ಜಿಲ್ಲಾಧಿಕಾರಿ ಮಂಜುನಾಥ್ ಪ್ರತಿಕ್ರಿಯಿಸಿ,‘₹ 3.56 ಕೋಟಿ ಆರ್‌ಟಿಇ ಅನುದಾನ ನೀಡಬೇಕು ಎಂದು ಇಲಾಖೆಯ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ಎಲ್ಲಾ ಶಿಕ್ಷಣ ಸಂಸ್ಥೆಗಳ ಆರ್‌ಟಿಇ ಬಾಕಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಶಾಲೆಗಳಲ್ಲಿ ಸುರಕ್ಷತೆ: ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಶಾಲಾ ಆವರಣ ಗೋಡೆ, ತರಗತಿ ಕೋಣೆಯಲ್ಲಿ ಗಾಳಿ-ಬೆಳಕು, ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮುಂತಾದ ಸೌಕರ್ಯಗಳನ್ನು ಕಲ್ಪಿಸಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಬೇಕು. ಅಂತಹ ವ್ಯವಸ್ಥೆಗಳನ್ನು ಒಂದು ವರ್ಷದಲ್ಲಿ ಕಡ್ಡಾಯವಾಗಿ ಮಾಡಬೇಕು’ ಎಂದು ಸೂಚಿಸಿದರು.

ಶಾಲಾ ಶುಲ್ಕ: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಪ್ರವೇಶಕ್ಕೆ ಸಂಬಂಧಿಸಿ ದಂತೆ ಸದ್ಯದಲ್ಲಿಯೇ ಶಾಲಾ ಶುಲ್ಕ ನಿಗದಿಗಾಗಿ ಶಿಕ್ಷಣ ಇಲಾಖೆಯ ಆಯುಕ್ತರಿಂದ ಸುತ್ತೋಲೆ ಬರಲಿದ್ದು, ಆ ಪ್ರಕಾರ ಮಕ್ಕಳಿಗೆ ಪ್ರವೇಶ ನೀಡಬೇಕು. ಶಾಲಾ ಪ್ರವೇಶ ಶುಲ್ಕ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ (ಡೇರಾ)ಕ್ಕೆ ದೂರು ಸಲ್ಲಿಸಬಹುದು ಎಂದು ಅವರು ತಿಳಿಸಿದರು.

‘ಶಾಲೆಗಳಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ಸೂಚಿಸಿದ ಅವರು, ಅರಣ್ಯ ಇಲಾಖೆಯಲ್ಲಿ 8.5ಲಕ್ಷ ಸಸಿಗಳಿವೆ. ಅವುಗಳನ್ನು ಪಡೆದು ಅಂದು ಪ್ರತಿಯೊಂದು ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಬೇಕು. ಹಾಗೆಯೇ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ ಮುಂತಾದೆಡೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲು ಶಾಲಾ ಮಕ್ಕಳಿಂದ ಅಭಿಯಾನ ನಡೆಸಬೇಕು’ ಎಂದು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜ ಗವನಳ್ಳಿ, ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ, ಶಿಕ್ಷಣ ಅಭಿಯಾನದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಮಾರುತಿ ಹುಜರತಿ ಇದ್ದರು.’

**

ಅಂಕಗಳ ಮೇಲೆ ಮಕ್ಕಳ ಭವಿಷ್ಯ ನಿರ್ಧಾರವಾಗುವ ಕಾಲ ಈಗಿಲ್ಲ. ಗುಣಮಟ್ಟ ಕಲಿಕೆಯಿಂದ ಮಾತ್ರ ಉತ್ತಮ ಫಲಿತಾಂಶ ಹಾಗೂ ಮಕ್ಕಳ ಭವಿಷ್ಯ ಕಟ್ಟಲು ಸಾಧ್ಯ

ಜೆ.ಮಂಜುನಾಥ, ಜಿಲ್ಲಾಧಿಕಾರಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry