ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಧರಣಿ

7
ಜಿಲ್ಲಾಧಿಕಾರಿ ಕಚೇರಿ ಎದುರು ಆಟೊ ನಿಲ್ಲಿಸಿ ಆಕ್ರೋಶ

ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಧರಣಿ

Published:
Updated:

ಕೋಲಾರ: ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಆಟೊ ಚಾಲಕರ ಜಂಟಿ ಕ್ರಿಯಾ ಸಮಿತಿ ಸದಸ್ಯರು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಆಟೊಗಳನ್ನು ನಿಲ್ಲಿಸಿದ ಧರಣಿನಿರತರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರು ಗತಿಯಲ್ಲಿ ಸಾಗಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರವು ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್‌ ದೂರಿದರು.

‘ಲೀಟರ್‌ ಪೆಟ್ರೋಲ್‌ ಬೆಲೆ ₹ 80 ಹಾಗೂ ಡೀಸೆಲ್‌ ಬೆಲೆ ₹ 70ರ ಗಡಿ ದಾಟಿದೆ. ಅಡುಗೆ ಅನಿಲ ಸಿಲಿಂಡರ್‌ ಬೆಲೆ ₹ 700ರ ಆಸುಪಾಸಿನಲ್ಲಿದೆ. ಬೇಳೆ ಕಾಳು, ಅಕ್ಕಿ, ಅಡುಗೆ ಎಣ್ಣೆಯಂತಹ ಆಹಾರ ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ಜನರ ದುಡಿಮೆಯ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಬಡ ಮತ್ತು ಮಧ್ಯಮ ವರ್ಗದ ಜನರು, ಕಾರ್ಮಿಕರು, ರೈತರು ತೊಂದರೆ ಅನುಭವಿಸುವಂತಾಗಿದೆ’ ಎಂದು ಹೇಳಿದರು.

ಕಷ್ಟದ ಅರಿವಿಲ್ಲ: ‘ಪ್ರಧಾನಿ ಮೋದಿ 4 ವರ್ಷಗಳಲ್ಲಿ ಜನಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಅವರಿಗೆ ಜನಸಾಮಾನ್ಯರ ಕಷ್ಟದ ಅರಿವಿಲ್ಲ. ನೋಟು ಅಮಾನ್ಯೀಕರಣ ಕ್ರಮದಿಂದ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ’ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಜಿ. ಶ್ರೀನಿವಾಸಮೂರ್ತಿ ಆರೋಪಿಸಿದರು.

‘ತೈಲ ಕಂಪನಿಗಳು ಬಡ ಜನರ ಹಣ ಲೂಟಿ ಮಾಡುತ್ತಿವೆ. ಸರಕು ಮತ್ತು ಸೇವಾ ತೆರಿಗೆಯು (ಜಿಎಸ್‌ಟಿ) ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಜಿಎಸ್‌ಟಿ ಜಾರಿಗೆ ಬಂದರೂ ಕೇಂದ್ರವು ತಾರತಮ್ಯ ತೆರಿಗೆ ನೀತಿ ಅನುಸರಿಸುತ್ತಿದೆ’ ಎಂದು ಕಿಡಿಕಾರಿದರು.

ಬೀದಿಗಿಳಿದು ಹೋರಾಟ: ‘ಕೇಂದ್ರದ ದುರಾಡಳಿತದಿಂದ ಬೇಸತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದಾರೆ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸದಿದ್ದರೆ ದೇಶಕ್ಕೆ ಭವಿಷ್ಯದಲ್ಲಿ ಮತ್ತಷ್ಟು ಕಷ್ಟದ ದಿನಗಳು ಎದುರಾಗುತ್ತವೆ. ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಬೇಕು. ತೈಲೋತ್ಪನ್ನ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಜನ ಬೀದಿಗಿಳಿದು ಹೋರಾಟ ನಡೆಸುತ್ತಾರೆ’ ಎಂದು ಧರಣಿನಿರತರು ಎಚ್ಚರಿಕೆ ನೀಡಿದರು.

ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ಸುಬ್ರಮಣಿ, ಮುಳಬಾಗಿಲು ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಆಟೊ ರಕ್ಷಾ ಸೌಹಾರ್ದ ಸಹಕಾರಿ ನಿಯಮಿತ ಉಪಾಧ್ಯಕ್ಷ ಅಮ್ಜದ್ ಪಾಷಾ, ಕೋಲಾರ ತ್ರಿಚಕ್ರ ವಾಹನ ಚಾಲಕರ ಸಂಘದ ಉಪಾಧ್ಯಕ್ಷ ವೇಣುಗೋಪಾಲ್, ಜಿಲ್ಲಾ ಘಟಕದ ಕಾರ್ಯದರ್ಶಿ ರಮೇಶ್‌ಬಾಬು ಪಾಲ್ಗೊಂಡಿದ್ದರು.

**

ದೇಶದ ಐದು ದಶಕದ ಇತಿಹಾಸದಲ್ಲೇ 16 ದಿನದಲ್ಲಿ 16 ಬಾರಿ ತೈಲೋತ್ಪನ್ನಗಳ ಬೆಲೆ ಏರಿಕೆ<br/>ಯಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನ ತತ್ತರಿಸಿದ್ದಾರೆ

ಕೆ.ವಿ.ಸುರೇಶ್‌ಕುಮಾರ್‌, ರಾಜ್ಯ ಆಟೊ ಚಾಲಕರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry