ಮಳೆಯಿಂದ ಹಾನಿ: ಪರಿಹಾರಕ್ಕೆ ಸೂಚನೆ

7
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಕಲ್ಪನಾ ಅಧ್ಯಕ್ಷತೆಯಲ್ಲಿ ಸಭೆ

ಮಳೆಯಿಂದ ಹಾನಿ: ಪರಿಹಾರಕ್ಕೆ ಸೂಚನೆ

Published:
Updated:

ಮಡಿಕೇರಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುವ ಸಾಧ್ಯತೆಯಿದ್ದು, ಜಿಲ್ಲಾಡಳಿತ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಕಲ್ಪನಾ ಭಾನುವಾರ ಸಭೆ ನಡೆಸಿದರು.

ನಗರದ ಸುದರ್ಶನ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಕಲ್ಪನಾ ಅವರು, ‘ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದೆ. ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೆ ಪ್ರವಾಹ, ಗುಡ್ಡ ಕುಸಿತ, ಜನ– ಜಾನುವಾರುಗಳಿಗೆ ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಮಳೆ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ನಿಫಾ ವೈರಸ್ ಹರಡದಂತೆ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಮಳೆಯಾದರೂ ಕುಡಿಯುವ ನೀರಿನ ಸಮಸ್ಯೆಯಿದೆ ಎಂಬ ದೂರುಗಳಿವೆ. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು’ ಎಂದು ಕಲ್ಪನಾ ಸೂಚಿಸಿದರು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ‘ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಕಂದಾಯ ಇಲಾಖೆ ಸೇರಿದಂತೆ ಲೋಕೋಪಯೋಗಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಅರಣ್ಯ, ಪೊಲೀಸ್, ಗೃಹ ರಕ್ಷಕ ದಳಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ಹೇಳಿದರು.

‘ಮುಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಮುಸುಕಿನ ಜೋಳವನ್ನು ಬಿತ್ತನೆ ಮಾಡಲಾಗುತ್ತಿದೆ. ಮುಂಗಾರು ಬಿತ್ತನೆ ಜೊತೆಗೆ ಇತರೆ ಇಳುವರಿಗೆ ಬೇಕಿರುವ ರಸಗೊಬ್ಬರವನ್ನೂ ದಾಸ್ತಾನು ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

‘ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಸಂಪರ್ಕ ವ್ಯವಸ್ಥೆಗಾಗಿ ದೋಣಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅತಿ ಮಳೆ, ಗಾಳಿಯಿಂದ ಮರ ಉರುಳಿ ಬಿದ್ದಲ್ಲಿ, ಭೂಕುಸಿತ ಉಂಟಾದಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಅವರು, ‘ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಲಾಗಿದೆ. ಹರಡುವ ಕಾಯಿಲೆಗಳಿಗೆ ಔಷಧಿಗಳನ್ನು ಮೊದಲೇ ದಾಸ್ತಾನು ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ರಮೇಶ್ ಪಿ. ಕೋನರೆಡ್ಡಿ, ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ತಹಶೀಲ್ದಾರ್‌ ಶಾರದಾಂಬಾ, ಗೋವಿಂದರಾಜು, ಬಾಡ್ಕರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ, ಎಇಇ ಇಬ್ರಾಹಿಂ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಹೇಮಕುಮಾರ್ ಸಭೆಯಲ್ಲಿ ಹಾಜರಿದ್ದರು.

ಮನೆ ಹಾನಿ ಪ್ರದೇಶಕ್ಕೆ ಭೇಟಿ:

ಸಭೆಗೂ ಮೊದಲು ಕತ್ತಲೆಕಾಡು ಗ್ರಾಮದಲ್ಲಿ ಮಳೆಯಿಂದ ಹಾನಿಯಾಗಿ ರುವ ವಾಸದ ಮನೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಪರಿಶೀಲನೆ ನಡೆಸಿದರು. ಈ ಸಂಬಂಧ ಕೂಡಲೇ ವರದಿ ಕಳುಹಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಹಾಯವಾಣಿ ಕೇಂದ್ರ ಆರಂಭ

ಮಡಿಕೇರಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ 24X7 ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ಅತಿವೃಷ್ಟಿಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣಿ: 08272 221077ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಕೋರಿದರು.

ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿರುವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯವಾಣಿ 1912ಗೆ ಕರೆ ಮಾಡಿ ಮಾಹಿತಿ ನೀಡಲು ಮನವಿ ಮಾಡಲಾಗಿದೆ ಎಂದೂ ತಿಳಿಸಿದರು.

ಪ್ರವಾಹ ಉಂಟಾಗಬಹುದಾದ ಕಡೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ, ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಶೀಲ್ದಾರ್‌ ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಮುಂಗಾರು ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು, ಮರಗಳು ರಸ್ತೆಗೆ ಬಿದ್ದು, ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದೂ ಹೇಳಿದರು.

**

ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ತಹಶೀಲ್ದಾರ್‌ ನೇತೃತ್ವದಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದೆ

ಪಿ.ಐ. ಶ್ರೀವಿದ್ಯಾ, ಜಿಲ್ಲಾಧಿಕಾರಿ

**

ಕಳೆದ ವಾರ ಸುರಿದ ಮಳೆಯಿಂದ ಜಾನುವಾರು ಸಾವು ಹಾಗೂ ವಾಸದ ಮನೆಗೆ ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು

ಜಿ. ಕಲ್ಪನಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry