ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳೇ ರಾಷ್ಟ್ರದ ಭವಿಷ್ಯ: ಸದಾನಂದ ಸ್ವಾಮಿ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ, ಜಾಗೃತಿ ಜಾಥಾ
Last Updated 13 ಜೂನ್ 2018, 12:10 IST
ಅಕ್ಷರ ಗಾತ್ರ

ಹಾವೇರಿ: ‘ಇಂದಿನ ಮಕ್ಕಳೇ ನಮ್ಮ ರಾಷ್ಟ್ರದ ಭವಿಷ್ಯದ ಸಂಪತ್ತು. ಹೀಗಾಗಿ, ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಗಳ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯ’ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ಹೇಳಿದರು.

ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಬಾಲಕಾರ್ಮಿಕರ ಯೋಜನಾ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆಶಾಕಿರಣ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ನಗರದ ಡಿ.ದೇವರಾಜ ಅರಸು ಭವನದಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು ಮತ್ತು ನೆರವು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯು ಕೇವಲ ಇಲಾಖೆಗಳಿಂದ ಸಾಧ್ಯವಿಲ್ಲ. ಅದಕ್ಕೆ ನಾವೆಲ್ಲರೂ ಕೈ ಜೋಡಿಸಬೇಕು. ಕಾರ್ಖಾನೆ ಅಥವಾ ಸಂಸ್ಥೆಗಳಲ್ಲಿ 14 ವರ್ಷ ವಯೋಮಾನದ ಒಳಗಿನ ಮಕ್ಕಳನ್ನು ದುಡಿಸಿಕೊಳ್ಳುವಂತಿಲ್ಲ’ ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಗಣೇಶ ಮಾತನಾಡಿ, ‘ನಮ್ಮ ಸಂವಿಧಾನವು ಪ್ರತಿಯೊಂದು ಇಲಾಖೆಗೂ ತನ್ನದೇ ಆದ ಜವಾಬ್ದಾರಿಗಳನ್ನು ನೀಡಿದೆ. ನಾವೆಲ್ಲ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಮಕ್ಕಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಎಲ್.ಲಾಡಖಾನ್ ಮಾತನಾಡಿದರು.

‘ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ’ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲರಾದ ರಾಜೇಶ್ವರಿ ಚಕ್ಕಳೇರ ‘ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಇರುವ ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರ’ದ ಕುರಿತು, ಆಶಾಕಿರಣ ಗ್ರಾಮೀಣಾಭಿವೃದ್ಧಿ ಸೊಸೈಟಿ ಅಧ್ಯಕ್ಷ ಮುತ್ತುರಾಜ ಮಾದರ, ‘ಮಕ್ಕಳ ಸುಧಾರಣಾ ಸಂಸ್ಥೆಗಳು, ತಂಗುದಾಣಗಳು, ಅನಾಥಾಶ್ರಮಗಳು ಹಾಗೂ ವೀಕ್ಷಣಾಲಯಗಳ’ ಕುರಿತು ರಾಣೆಬೆನ್ನೂರು ನಗರದ ಬಾಲಕರ ಬಾಲ ಮಂದಿರ ಅಧೀಕ್ಷಕಿ ಜಯಶ್ರೀ ಪಾಟೀಲ ಹಾಗೂ ‘ಪೊಲೀಸ್ ದೂರು ಪ್ರಾಧಿಕಾರದ ರಚನೆ ಮತ್ತು ಮಹತ್ವದ’ ಕುರಿತು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎಂ.ಐ.ಗೌಡಪ್ಪಗೌಡ್ರ ಉಪನ್ಯಾಸ ನೀಡಿದರು.

ಇದಕ್ಕೂ ಮೊದಲು ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಿಂದ ಆರಂಭಗೊಂಡ ವಿವಿಧ ಶಾಲೆಗಳ ಮಕ್ಕಳ ಜಾಗೃತಿ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಿ.ದೇವರಾಜ ಅರಸು ಭವನವನ್ನು ತಲುಪಿತು.

ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾಧ ವಾಸುದೇವ ಆರ್.ಗುಡಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದೇವರಾಜ ನಾಯ್ಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ಎನ್.ಮಾಳಿಗೇರ ಇದ್ದರು.

ಹೋಟೆಲ್, ಗ್ಯಾರೇಜ್ ಮತ್ತಿತರೆಡೆ ಕೆಲಸ ಮಾಡುತ್ತಿರುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ‘1098’ಗೆ ಕರೆ ಮಾಡಿ ಮಾಹಿತಿ ನೀಡಿ
– ಶಾಂತಾ ಹುಲ್ಮನಿ, ಹೆಚ್ಚುವರಿ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT