ಅನಿಷ್ಟ ಪದ್ಧತಿ ನಿರ್ಮೂಲನೆಗೆ ಪಣ ತೊಡಿ

7
ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಜಿಲ್ಲಾ ನ್ಯಾಯಾಧೀಶ ಎಸ್.ಎಚ್. ಕೋರಡ್ಡಿ ಅಭಿಮತ

ಅನಿಷ್ಟ ಪದ್ಧತಿ ನಿರ್ಮೂಲನೆಗೆ ಪಣ ತೊಡಿ

Published:
Updated:

ಚಿಕ್ಕಬಳ್ಳಾಪುರ: ‘ಬಡತನ, ಅನಕ್ಷರತೆ, ವಲಸೆ ಜತೆಗೆ ಪೋಷಕರ ನಿಷ್ಕಾಳಜಿಯೇ ಬಾಲ ಕಾರ್ಮಿಕ ಪದ್ಧತಿಗೆ ಮೂಲ ಕಾರಣ. ಇದನ್ನು ಪೂರ್ಣ ತೊಡೆದು ಹಾಕುವ ನಿಟ್ಟಿನಲ್ಲಿ ಸಮಾಜದಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಚ್.ಕೋರಡ್ಡಿ ಅಭಿಪ್ರಾಯಪಟ್ಟರು.

ನಗರದಲ್ಲಿ ಮಂಗಳವಾರ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

‘ಕಳೆದ ವರ್ಷವಷ್ಟೇ  ರಾಷ್ಟ್ರದಲ್ಲಿ ಬಾಲ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ– 1986ಕ್ಕೆ ತರಲಾದ ತಿದ್ದುಪಡಿ ಪ್ರಕಾರ, 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗದಲ್ಲಿ ತೊಡಗುವುದಕ್ಕೆ ನಿಷೇಧವಿದೆ. ಜತೆಗೆ 14ರಿಂದ 18 ವರ್ಷದ ಹದಿಹರೆಯದವರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ನೇಮಕ ಮಾಡಿಕೊಳ್ಳುವುದಕ್ಕೂ ನಿಷೇಧವಿದೆ’ ಎಂದು ಹೇಳಿದರು.

‘ಹಲವು ಕಟ್ಟುನಿಟ್ಟಿನ ಕಾಯ್ದೆಗಳ ಜಾರಿ ನಡುವೆಯೂ ಸಮಾಜದಲ್ಲಿ ಇಂದಿಗೂ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿದೆ. ವಿಶ್ವದಲ್ಲಿ 20 ಲಕ್ಷಕ್ಕೂ ಅಧಿಕ ಬಾಲ ಕಾರ್ಮಿಕರನ್ನು ಗುರುತಿಸಲಾಗಿದೆ. ಇದರಲ್ಲಿ 11.50 ಲಕ್ಷಕ್ಕೂ ಅಧಿಕ ಮಕ್ಕಳು ವಿಷಕಾರಿ ಉತ್ಪನ್ನಗಳ ತಯಾರಿಕೆ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದು ಕಳವಳಕಾರಿ ಸಂಗತಿ’ ಎಂದು ಹೇಳಿದರು.

‘ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಪೋಷಕರು ಮಕ್ಕಳನ್ನು ದುಡಿಮೆಗೆ ಕಳುಹಿಸುವ ಬದಲು ಉತ್ತಮ ಶಿಕ್ಷಣವನ್ನು ಒದಗಿಸುವ ಮೂಲಕ ಅವರ ಉಜ್ವಲ ಭವಿಷ್ಯವನ್ನು ರೂಪಿಸಬೇಕು. ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗುವ ಮೂಲಕ ಸ್ವಸ್ಥ ಸಮಾಜದ ನಿರ್ಮಾಣ ಮಾಡಬೇಕಿದೆ’ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎಂ.ಜಿ.ಗೋಪಾಲ್ ಮಾತ ನಾಡಿ, ‘ರಾಜ್ಯದಲ್ಲಿ 1.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಅವರನ್ನು ಮರಳಿ ಶಾಲೆಗೆ ಕರೆ ತರುವ ಪ್ರಯತ್ನಗಳು ನಡೆದಿವೆ. ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಂಡವರ ವಿರುದ್ಧ 24 ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ’ ಎಂದು ಹೇಳಿದರು.

ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ ಮಾತನಾಡಿ, ‘ಕಡ್ಡಾಯ ಶಿಕ್ಷಣದಿಂದ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬಹುದು. ಈ ನಿಟ್ಟಿನಲ್ಲಿ ಶಾಲೆಯಿಂದ ದೂರ ಉಳಿದಿರುವ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಾಲೆಗೆ ಕರೆತರುವ ಕೆಲಸಗಳು ಹೆಚ್ಚೆಚ್ಚು ನಡೆಯಬೇಕಿದೆ. ಸಾರ್ವಜನಿಕರು ಬಾಲ ಕಾರ್ಮಿಕರನ್ನು ಕಂಡಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಈ ಪದ್ಧತಿಯನ್ನು ತಡೆಗಟ್ಟಬಹುದು’ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಬಿ.ಬಿ.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿಯಿಂದ ಆರಂಭಗೊಂಡ ಜಾಗೃತಿ ಜಾಥಾಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ದೇವರಾಜ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಲೋಕೇಶ್ ಅವರು ಚಾಲನೆ ನೀಡಿದರು. ನೂರಾರು ವಿದ್ಯಾರ್ಥಿಗಳು ಪ್ರಮುಖ ರಸ್ತೆಗಳ ಮೂಲಕ ಜಾಥಾ ನಡೆಸಿ ಬಾಲ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ಕೆ.ವಿ.ಬಾಲಾಜಿ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಲಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಎಂ.ಎನ್.ವಿಜಯ್‌ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಟಿ.ನಿರಂಜನ್, ಕಾರ್ಮಿಕ ನಿರೀಕ್ಷಕ ಎಚ್.ಎಂ.ಸೋಮಶೇಖರ್ ಉಪಸ್ಥಿತರಿದ್ದರು.

ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಆದರೆ, ಸಮಾಜದಲ್ಲಿ ಅನೇಕ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದು ಶೋಚನೀಯ

ಎಸ್.ಎಚ್. ಕೋರಡ್ಡಿ, ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry