ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್ ಸುತ್ತ 20 ಕಿ.ಮೀ ವ್ಯಾಪ್ತಿ ಗಣಿಗಾರಿಕೆ ಸಂಪೂರ್ಣ ಸ್ಥಗಿತ: ಡಿಸಿ ಆದೇಶ

Last Updated 9 ಅಕ್ಟೋಬರ್ 2018, 14:04 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಆದೇಶ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಹಿರಿಯ ಅಧಿಕಾರಿಗಳ ತುರ್ತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಕೃತಿ ವಿಕೋಪ ಕೇಂದ್ರ ನೀಡಿರುವ ವರದಿಯನ್ನು ಆಧರಿಸಿ ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಜಲಾಶಯದ ಸುತ್ತ ಭಾರಿ ಸ್ಫೋಟಕಗಳನ್ನು ಬಳಸಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವರದಿಗಳು ಬಂದಿವೆ. ಈ ಭಾಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಕೂಡ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತಂತೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ವರದಿ ನೀಡಬೇಕು ಎಂದು ತಿಳಿಸಿದರು.

ನೀರಾವರಿ ಇಲಾಖೆಯೊಂದಿಗೆ ಸಂಪರ್ಕ ಇಟ್ಟುಕೊಂಡು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಗಬಹುದಾದ ತೊಂದರೆ ಕುರಿತಂತೆ ಸಮಗ್ರ ಅಧ್ಯಯನ ವರದಿಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಬೇಕು. ಸಾರ್ವಜನಿಕರು ಗಣಿಗಾರಿಕೆ ನಿಷೇಧ ಕುರಿತಂತೆ ನೀಡುವ ಯಾವುದೇ ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಲು 3 ತಂಡಗಳನ್ನು ರಚಿಸಲಾಗಿದೆ. ಕೆಆರ್‌ಎಸ್ ವ್ಯಾಪ್ತಿಯ ಹಿನ್ನೀರಿನ ಭಾಗದಲ್ಲಿ ಕೆ.ಆರ್.ನಗರ ತಾಲ್ಲೂಕು ಹೊಂದಿಕೊಂಡಂತೆ ಕೆಲವು ಗ್ರಾಮಗಳಲ್ಲಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿಗಳಿವೆ. ಈ ಕುರಿತಂತೆ ಮೈಸೂರು ಜಿಲ್ಲಾಧಿಕಾರಿಗೆ ಪತ್ರ ಬರೆದು ಗಣಿಗಾರಿಕೆ ನಿಷೇಧಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಕೆಆರ್‌ಎಸ್ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸುವ ಬಗ್ಗೆ ರೈತರು, ಜನಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ಮಾಧ್ಯಮಗಳ ಮೂಲಕ ಹೇಳಿರುವುದು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶಿವಪ್ರಕಾಶ್, ಗಣಿ ಭೂವಿಜ್ಞಾನ ಇಲಾಖೆ ಅಧಿಕಾರಿ ನಾಗಭೂಷಣ್, ಅರಣ್ಯ ಇಲಾಖೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT