ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮದ್ಯ ಮಾರಾಟ ತಡೆಯಿರಿ

ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ ಸೂಚನೆ
Last Updated 16 ಜೂನ್ 2018, 7:19 IST
ಅಕ್ಷರ ಗಾತ್ರ

ಕಲಘಟಗಿ: ‘ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟದಿಂದ ಯುವಕರು ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನು ತಡೆಯಬೇಕು’ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಇಲ್ಲಿನ ತಹಶೀಲ್ದಾರ್‌ ಕಚೇರಿಗೆ ರೋಗ ಬಂದಂತಿದೆ. ಗ್ರಾಮ ಲೆಕ್ಕಾಧಿಕಾರಿಗಳು ಕಂದಾಯ ಅಧಿಕಾರಿಗಳು ಸಾರ್ವಜನಿಕರಿಗೆ ಬಹಳ ತೊಂದರೆ ಕೊಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿವೆ. ಕರ್ತವ್ಯಲೋಪ ಮಾಡಿರುವ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ತಹಶೀಲ್ದಾರ್‌ಗೆ ಸೂಚಿಸಿದರು.

‘ಕೃಷಿ ಇಲಾಖೆ ನೌಕರರು ಸಂಪೂರ್ಣವಾಗಿ ರೈತರ ಪರವಾಗಿ ಕೆಲಸ ಮಾಡಬೇಕು. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು. ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಪ್ರಚಾರವನ್ನು ಕೈಗೊಳ್ಳಬೇಕು’ ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ರಾತ್ರಿ ಹೊತ್ತು ವಿದ್ಯುತ್ ಸಂಪರ್ಕ ಕಡಿತವಾಗದಂತೆ ನೋಡಿಕೊಳ್ಳಬೇಕೆಂದು ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ದಾಸ್ತಿಕೊಪ್ಪ ಆದರ್ಶ ವಿದ್ಯಾಲಯಕ್ಕೆ ಸೂಕ್ತ ವೇಳೆಯಲ್ಲಿ ಬಸ್ ಸಂಪರ್ಕ ಕಲ್ಪಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಶಾಸಕರಿಗೆ ಮನವಿ ಮಾಡಿದರು.

‘ಮುಕ್ಕಲ್ಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಇದರಿಂದ ರೋಗಿಗಳು ಪರದಾಡುವಂತಾಗಿದೆ. ಈ ಕುರಿತು ಸಂಬಂಧಪಟ್ಟ ಪಿಡಿಒಗೆ ತಿಳಿಸಬೇಕು. ಆದರೆ ಅವರೇ ಇಲ್ಲಿ ಹಾಜರಿಲ್ಲ’ ಎಂದು ಸದಸ್ಯೆ ಕವಿತಾ ಬಡಿಗೇರ ಆಕ್ಷೇಪಿಸಿದರು.

‘ತಾಲ್ಲೂಕಿನ ಬಿ. ಗುಡಿಹಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಲಮಾಣಿ ದೂರಿದರು.

ಕಾರ್ಯನಿರ್ವಾಹಕ ಅಧಿಕಾರಿ ಎಸ್. ಎಂ. ಕಾಂಬಳೆ, ಉಪಾಧ್ಯಕ್ಷ ಚಂದ್ರಗೌಡ ಪಾಟೀಲ, ಸ್ಥಾಯಿ ಸಮಿತಿ ರಾಜು ವಾಲೀಕಾರ, ಪಿ.ಎಸ್.ಐ ಆನಂದ ದೋಣಿ, ಪ್ರೊಬೇಷನರಿ ತಹಶೀಲ್ದಾರ್‌ ಯಲ್ಲಪ್ಪ ಗೋಣೆಣ್ಣವರ, ಸಮಾಜ ಕಲ್ಯಾಣ ಅಧಿಕಾರಿ ನಂದಾ ಹುರಳಿ, ಸಿಡಿಪಿಒ ಜೆ.ಪದ್ಮಾವತಿ, ಕೃಷಿ ಅಧಿಕಾರಿ ಪ್ರದೀಪ ಕಿವಟೆ ಉಪಸ್ಥಿತರಿದ್ದರು.

ಕೃಷಿ ಇಲಾಖೆ ಅಧಿಕಾರಿಗಳು ರೈತರ ಪರ ಕೆಲಸ ಮಾಡಬೇಕು. ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಬೇಕು
ಸಿ.ಎಂ. ನಿಂಬಣ್ಣವರ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT