ಜೋಗಕ್ಕೆ ಹೆಚ್ಚಿನ ಸಿಬ್ಬಂದಿ ನೇಮಕ: ಸೂಚನೆ

7

ಜೋಗಕ್ಕೆ ಹೆಚ್ಚಿನ ಸಿಬ್ಬಂದಿ ನೇಮಕ: ಸೂಚನೆ

Published:
Updated:
ಜೋಗಕ್ಕೆ ಹೆಚ್ಚಿನ ಸಿಬ್ಬಂದಿ ನೇಮಕ: ಸೂಚನೆ

ಸಾಗರ: ಮಳೆಗಾಲದಲ್ಲಿ ಜೋಗ ಜಲಪಾತ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಅವಧಿಯಲ್ಲಿ ಜಲಪಾತ ಪ್ರದೇಶದಲ್ಲಿ ಬಂದೋಬಸ್ತ್ ಗೆ ಹೆಚ್ಚಿನ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾಧಿಕಾರಿ ಡಾ.ಎಂ. ಲೋಕೇಶ್ ಸೂಚಿಸಿದರು.

ತಾಲ್ಲೂಕಿನ ಜೋಗ ಜಲಪಾತ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ತಾಲ್ಲೂಕು ಆಡಳಿತದ ಮೇಲೆ ಇದೆ. ಅದೇ ರೀತಿ ಪ್ರವಾಸಕ್ಕೆ ಬಂದವರು ಸ್ಥಳೀಯರಿಗೆ ಅಥವಾ ಇತರೆ ಪ್ರವಾಸಿಗರಿಗೆ ತೊಂದರೆ ನೀಡಿದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಗತ್ಯವಿರುವ ನಿಗಾ ವಹಿಸಬೇಕು ಎಂದು ತಿಳಿಸಿದರು.

ಜೋಗ ಜಲಪಾತಕ್ಕೆ ಬರುವ ಮಾರ್ಗದಲ್ಲಿನ ಧರೆ ಕುಸಿದು, ಮರಗಳು ಬಿದ್ದಲ್ಲಿ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟಲು ಮುಂಜಾಗ್ರತೆ ವಹಿಸಬೇಕು. ಜಲಪಾತ ಪ್ರದೇಶದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಮದ್ಯಪಾನ ನಿಷೇಧ ವಲಯದಲ್ಲಿ ಮದ್ಯಪಾನ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಬಂದೋಬಸ್ತ್ ಸಿಬ್ಬಂದಿ ಮೇಲೆ ಇರುತ್ತದೆ. ಜೋಗಕ್ಕೆ ಬರುವ ಪ್ರವಾಸಿಗರು ಸುತ್ತಮುತ್ತಲಿನ ಇತರ ಪ್ರವಾಸಿ ಕೇಂದ್ರಗಳಿಗೂ ತೆರಳಲು ಅನುಕೂಲವಾಗುವಂತೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಕಿವಿಮಾತು ಹೇಳಿದರು.

ಉಪವಿಭಾಗಾಧಿಕಾರಿ ನಾಗರಾಜ್ ಆರ್. ಸಿಂಗ್ರೇರ್, ಪ್ರಭಾರ ತಹಶೀಲ್ದಾರ್ ಟಿ. ಪರಮೇಶ್ವರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಟಿ.ಪಿ. ರಮೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry