ಪರೀಕ್ಷೆ ಸುಸೂತ್ರ ನಡೆಸಲು ಡಿಸಿ ಸೂಚನೆ

7
21 ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಆರಂಭ

ಪರೀಕ್ಷೆ ಸುಸೂತ್ರ ನಡೆಸಲು ಡಿಸಿ ಸೂಚನೆ

Published:
Updated:
ಪರೀಕ್ಷೆ ಸುಸೂತ್ರ ನಡೆಸಲು ಡಿಸಿ ಸೂಚನೆ

ಬೀದರ್‌: ‘ಜಿಲ್ಲೆಯಲ್ಲಿ ಜೂನ್ 21ರಿಂದ 28ರ ವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ಸುಸೂತ್ರ ಮತ್ತು ಪಾರದರ್ಶಕವಾಗಿ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ಆಸನ, ಪೀಠೋಪಕರಣ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.

‘ಪರೀಕ್ಷಾ ಕೇಂದ್ರದಲ್ಲಿ ನಕಲು, ಅಭ್ಯರ್ಥಿಯ ಬದಲು ಇತರರು ಹಾಜರಾಗುವಂತಹ ಘಟನೆಗಳಿಗೆ ಆಸ್ಪದ ನೀಡಬಾರದು. ಜಿಲ್ಲಾ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ತಂಡಗಳನ್ನು ರಚಿಸಿ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಬೇಕು. ಪರೀಕ್ಷೆಗೆ ನಿಯೋಜನೆಗೊಂಡ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್‌ಗಳ ಸಭೆ ನಡೆಸಬೇಕು’ ಎಂದು ಸೂಚಿಸಿದರು.

‘ಪ್ರಶ್ನೆ ಪತ್ರಿಕೆಗಳ ಸ್ವೀಕಾರ, ವಿತರಣೆ ಹಾಗೂ ಸಾಗಣೆಯ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷೆಯ ದಿನದಂದು ವೀಕ್ಷಕರಾಗಿ ನಿಯೋಜನೆಯಾದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪರೀಕ್ಷೆ ಪ್ರಾರಂಭವಾಗುವ ಸಮಯದಿಂದ ಮುಕ್ತಾಯದ ವರೆಗೂ ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು’ ಎಂದು ನಿರ್ದೇಶನ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಉಮೇಶ ಶಿರಹಟ್ಟಿಮಠ ಮಾತನಾಡಿ, ‘ಔರಾದ್‌ನಲ್ಲಿ 938, ಬಸವಕಲ್ಯಾಣ 2,598, ಭಾಲ್ಕಿ 1,031, ಬೀದರ್ 2,415 ಹಾಗೂ ಹುಮನಾಬಾದ್‌ನಲ್ಲಿ 1,738 ವಿದ್ಯಾರ್ಥಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 8,720 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 40 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ’ ಎಂದು ತಿಳಿಸಿದರು.

‘ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಐದು ಜಿಲ್ಲಾ ಮಟ್ಟದ ವಿಚಕ್ಷಣ ತಂಡಗಳು ಹಾಗೂ ಪ್ರತಿ ತಾಲ್ಲೂಕಿಗೆ 5-6 ತಂಡಗಳನ್ನು ನಿಯೋಜಿಸಲಾಗಿದೆ. ಇತರ ಇಲಾಖೆಗಳ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನಿಯೋಜನೆ ಮಾಡಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಜಿಲ್ಲಾ ಖಜಾನೆ ಅಧಿಕಾರಿ ಅಶೋಕ ವಡಗಾವೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !