ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಒತ್ತಾಯ

ಜಿಲ್ಲಾ ಪಂಚಾಯಿತಿ ಎದುರು ದಲಿತ ಸಂಘರ್ಷ ಸಮಿತಿ ಆಕ್ರೋಶ
Last Updated 19 ಜೂನ್ 2018, 13:56 IST
ಅಕ್ಷರ ಗಾತ್ರ

ಕೋಲಾರ: ಪರಿಶಿಷ್ಟ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ನಗರದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.

‘ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ ಬಿಡುಗಡೆಯಾಗಬೇಕಿತ್ತು. ಆದರೆ, ಇಲಾಖೆ ಅಧಿಕಾರಿಗಳು 5 ವರ್ಷಗಳಿಂದ ವಿದ್ಯಾರ್ಥಿವೇತನ ಕೊಡದೆ ಸತಾಯಿಸುತ್ತಿದ್ದಾರೆ. ಸರ್ಕಾರವು ವಿದ್ಯಾರ್ಥಿವೇತನಕ್ಕೆ ಅನುದಾನ ಬಿಡುಗಡೆ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಸರ್ಕಾರ ವಿದ್ಯಾರ್ಥಿವೇತನ ನೀಡುತ್ತದೆ. ಆದರೆ, ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸಕಾಲಕ್ಕೆ ವಿದ್ಯಾರ್ಥಿವೇತನ ಕೊಡದೆ ಶೋಷಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಪದೇ ಪದೇ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಅಲೆಯುವಂತಾಗಿದೆ’ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ನಾಗೇಶ್ ಹೇಳಿದರು.

‘ಜಿಲ್ಲೆಯಾದ್ಯಂತ ಐದು 5 ವರ್ಷಗಳಿಂದ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಂದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಹಲವು ಬಾರಿ ದೂರು ಕೊಟ್ಟಿದ್ದೇವೆ. ಆದರೆ, ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಗಮನ ಹರಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಬೂಬು ಹೇಳುತ್ತಾರೆ: ‘ವಿದ್ಯಾರ್ಥಿವೇತನ ವಿಳಂಬವಾಗಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅರ್ಜಿಗಳ ಪರಿಶೀಲನೆಗೆ ಸಿಬ್ಬಂದಿ ಕೊರತೆ ಎಂದು ಸಬೂಬು ಹೇಳುತ್ತಾರೆ. ಇಲಾಖೆಯಲ್ಲಿ ಸಾಕಷ್ಟು ಅಕ್ರಮ ನಡೆದಿದ್ದು, ಮಕ್ಕಳ ವಿದ್ಯಾರ್ಥಿವೇತನವನ್ನು ಅಧಿಕಾರಿಗಳೇ ದುರ್ಬಳಕೆ ಮಾಡಿಕೊಂಡಿರುವ ಗುಮಾನಿ ಇದೆ. ಆದರೆ, ಈ ಬಗ್ಗೆ ಅಧಿಕಾರಿಗಳು ಗುಟ್ಟು ಬಿಟ್ಟು ಕೊಡುತ್ತಿಲ್ಲ’ ಎಂದು ಧರಣಿನಿರತರು ಆರೋಪಿಸಿದರು.

‘ಅಧಿಕಾರಿಗಳು ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಅವರಿಗೆ ವಿದ್ಯಾರ್ಥಿಗಳ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ. ಜಿಲ್ಲಾಧಿಕಾರಿಯು ವಿದ್ಯಾರ್ಥಿವೇತನ ವಿಳಂಬವಾಗಿರುವ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಜತೆಗೆ ಬಾಕಿ ವಿದ್ಯಾರ್ಥಿವೇತನವನ್ನು ಸಾಧ್ಯವಾದಷ್ಟು ಬೇಗನೆ ಬಿಡುಗಡೆ ಮಾಡಿಸಬೇಕು. ಇಲ್ಲದಿದ್ದರೆ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ಸದಸ್ಯರಾದ ರಾಜಪ್ಪ, ಬಾಬು, ವೆಂಕಟೇಶ್, ಎನ್.ಮೂರ್ತಿ, ರವಿಕುಮಾರ್, ಪ್ರಕಾಶ್, ಮುನಿರಾಜು, ಹನುಮಪ್ಪ, ಆಂಜಿನಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT