ನಾಗ್ಪುರ (ಪಿಟಿಐ): ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್ ವೇನಲ್ಲಿ ಶುಕ್ರವಾರ ತಡರಾತ್ರಿ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತ
ದಲ್ಲಿ 25 ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.
ಚಾಲಕ, ಕ್ಲೀನರ್ ಸೇರಿದಂತೆ ಎಂಟು ಪ್ರಯಾಣಿಕರು ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಗಾಯಗೊಂಡಿರುವ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರೂ ಚೇತರಿಸಿಕೊಂಡಿದ್ದಾರೆ. ಪ್ರಯಾಣಿಕರಲ್ಲಿ ಹೆಚ್ಚಿನವರು ಗಾಢ ನಿದ್ದೆಯಲ್ಲಿದ್ದರು. ಹಾಗಾಗಿ, ತಕ್ಷಣವೇ ಹೊರಬರಲು ಸಾಧ್ಯವಾಗಿಲ್ಲ. ಸಾವಿನ ಸಂಖ್ಯೆ ಹೆಚ್ಚಳಕ್ಕೆ ಇದೇ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಲ್ಧಾನ ಜಿಲ್ಲೆಯ ಸಿಂಧಖೇಡರಾಜ ಸಮೀಪದ ಪಿಂಪಲಖುಟ ಗ್ರಾಮದ ಬಳಿ ಮಧ್ಯರಾತ್ರಿ 1.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಮಹಾರಾಷ್ಟ್ರ ಸರ್ಕಾರವು ಅವಘಡದ ಬಗ್ಗೆ ತನಿಖೆಗೆ ಆದೇಶಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ವನ್ನೂ ಘೋಷಿಸಿದೆ.
ಬೆಂಕಿ ಹೊತ್ತಿಕೊಂಡಿದ್ದು ಹೇಗೆ?: ಬಸ್ ವೇಗವಾಗಿ ಚಲಿಸುತ್ತಿದ್ದಾಗ ಟೈರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ವಿಭಜಕಕ್ಕೂ ಅಪ್ಪಳಿಸಿ ಬಲಭಾಗಕ್ಕೆ ಉರುಳಿದೆ. ಆಗ ಡೀಸೆಲ್ ಟ್ಯಾಂಕ್ ಸಿಡಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ.
ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಬಸ್ ಅನ್ನು ವ್ಯಾಪಿಸಿದೆ. ಬಸ್‌ನ ಬಾಗಿಲು ಭದ್ರವಾಗಿ ಲಾಕ್ ಆಗಿದ್ದರಿಂದ ಪ್ರಯಾಣಿಕರು ಹೊರಬರಲು ಸಾಧ್ಯವಾಗಿಲ್ಲ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅವಘಡದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬುಲ್ಧಾನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕಡಸ್ನೆ ತಿಳಿಸಿದ್ದಾರೆ.
ಎಕ್ಸ್‌ಪ್ರೆಸ್ ವೇನಲ್ಲಿ ಒತ್ತಡದಲ್ಲಿ ವಾಹನಗಳನ್ನು ಚಲಾಯಿಸುವ ಚಾಲಕರಿಗೆ ಈ ಬಸ್ ದುರಂತ ಎಚ್ಚರಿಕೆಯ ಗಂಟೆಯಾಗಿದೆಏಕನಾಥ ಶಿಂದೆ, ಮುಖ್ಯಮಂತ್ರಿ, ಮಹಾರಾಷ್ಟ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.