ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ: ಎನ್‌ಡಿಆರ್‌ಎಫ್‌ನ 26 ತಂಡಗಳ ನಿಯೋಜನೆ

Published 2 ಸೆಪ್ಟೆಂಬರ್ 2024, 2:24 IST
Last Updated 2 ಸೆಪ್ಟೆಂಬರ್ 2024, 2:24 IST
ಅಕ್ಷರ ಗಾತ್ರ

ನವದೆಹಲಿ: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಎರಡನೇ ದಿನವೂ ಮಳೆ ಮುಂದುವರಿದಿದೆ. ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 26 ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಎರಡು ರಾಜ್ಯಗಳಲ್ಲಿ ಈಗಾಗಲೇ 12 ತಂಡಗಳನ್ನು ನಿಯೋಜಿಸಲಾಗಿದ್ದು, ಇನ್ನೂ 14 ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

14 ತಂಡಗಳ ಪೈಕಿ 8 ತಂಡಗಳನ್ನು ದೇಶದ ವಿವಿಧ ಸ್ಥಳಗಳಿಂದ ವಿಮಾನದಲ್ಲಿ ಕರೆತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆ ಸಂಬಂಧಿತ ಅವಘಡಗಳಲ್ಲಿ ಈ ವರೆಗೆ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ರೈಲು ಸಂಚಾರ ರದ್ದು:

ತೆಲಂಗಾಣದ ವಿವಿಧೆಡೆ ಭಾರಿ ಮಳೆ ಮತ್ತು ರೈಲು ಹಳಿಗಳ ಮೇಲೆ ನೀರು ನಿಂತ ಕಾರಣ 99 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ನಾಲ್ಕು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದ್ದು, 54 ರೈಲುಗಳ ಸಂಚಾರದ ಮಾರ್ಗವನ್ನು ಬದಲಿಸಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು , ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ನೆರವು ನೀಡುವ ಭರವಸೆ ನೀಡಿದ ಪ್ರಧಾನಿ:

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಸಿಎಂ ಎ. ರೇವಂತ್ ರೆಡ್ಡಿ ಅವರೊಂದಿಗೆ ಮಾತನಾಡಿದ್ದಾರೆ. ಮಳೆ ಮತ್ತು ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT