ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಥಾಣೆ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಸಾವು

Published 23 ಮೇ 2024, 11:04 IST
Last Updated 23 ಮೇ 2024, 11:04 IST
ಅಕ್ಷರ ಗಾತ್ರ

ಥಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ ಸುಮಾರು 1.40ಕ್ಕೆ ಸಂಭವಿಸಿದ ಸ್ಫೋಟದಲ್ಲಿ  ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದು 48 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ದೊಂಬಿವಿಲ್‌ ಪ್ರದೇಶದಲ್ಲಿಯ ಅಮುದಾನ್‌ ಕೆಮಿಕಲ್ಸ್‌ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಪಕ್ಕದ ಕಾರ್ಖಾನೆಗಳಿಗೂ ಬೆಂಕಿ ಆವರಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ದುರಂತದಲ್ಲಿ ಮೃತಪಟ್ಟಿರುವವರು ಅಕ್ಕಪಕ್ಕದ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದವರು ಎಂದು ಮಹಾರಾಷ್ಟ್ರ ಕೈಗಾರಿಕಾ ಸಚಿವ ಉದಯ್‌ ಸಾಮಂತ್‌ ತಿಳಿಸಿದ್ದಾರೆ.

‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌, ‘ದುರಂತದಲ್ಲಿ ಗಾಯಗೊಂಡಿರುವವರಿಗೆ ಎಐಎಂಎಸ್‌, ನೆಪ್ಚೂನ್‌ ಮತ್ತು ಗ್ಲೋಬಲ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಜೊತೆ ಪೊಲೀಸರು, ಸ್ಥಳೀಯ ಅಧಿಕಾರಿಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ‍ಪಡೆಯ (ಎನ್‌ಡಿಆರ್‌ಎಫ್‌) ಸಿಬ್ಬಂದಿ ಕೂಡಾ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಆ ಪ್ರದೇಶದ ಕೆಲ ಮನೆಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಕೈಗಾರಿಕಾ ಘಟಕವು ಕೆಲವು ತಿಂಗಳ ಹಿಂದೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಈಚೆಗೆ ಅದನ್ನು ಪುನರಾರಂಭಿಸಲಾಗಿತ್ತು ಎಂದು ಸಾಮಂತ್‌ ಅವರು ತಿಳಿಸಿದರು. ಸ್ಥಳೀಯ ಶಾಸಕ ಶ್ರೀಕಾಂತ್‌ ಶಿಂದೆ ಮತ್ತು ಶಾಸಕ ರಾಜು ಪಾಟೀಲ್‌ ಅವರು ಎಂಐಡಿಸಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT