ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ಬಂಧನಕ್ಕೆ ಖಂಡನೆ: ಮೋದಿ ನಿವಾಸಕ್ಕೆ ಮುತ್ತಿಗೆ ಕರೆ, ಬಿಗಿ ಭದ್ರತೆ

Published 26 ಮಾರ್ಚ್ 2024, 4:40 IST
Last Updated 26 ಮಾರ್ಚ್ 2024, 4:40 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಹಲವು ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ನವದೆಹಲಿ ಮತ್ತು ಸೆಂಟ್ರಲ್ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರ ದಟ್ಟನೆ ಉಂಟಾಗುವ ಸಾಧ್ಯತೆ ಇದೆ ಎಂದು ದೆಹಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪ್ರಧಾನಿ ನಿವಾಸದ ಸುತ್ತ ಈಗಾಗಲೇ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಪ್ರತಿಭಟನೆ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಬಂಧನ ವಿರೋಧಿಸಿ ಮಂಗಳವಾರ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ದೆಹಲಿ ಸಚಿವ ಗೋಪಾಲ್ ರಾಯ್ ಘೋಷಿಸಿದ್ದರು. ಜತೆಗೆ ರಾಷ್ಟ್ರವ್ಯಾಪಿ ‘ಮೆಗಾ ಪ್ರತಿಭಟನೆ’ ನಡೆಸುವುದಾಗಿಯೂ ರಾಯ್‌ ಹೇಳಿದ್ದರು.

ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಜತೆಗೆ ಕೇಜ್ರಿವಾಲ್ ಅವರನ್ನು ಮಾರ್ಚ್‌ 28ರವರೆಗೆ (ಗುರುವಾರ) ಇ.ಡಿ ಕಸ್ಟಡಿ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಅಬಕಾರಿ ನೀತಿ ಹಗರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಪ್ರಮುಖ ಸಂಚುಕೋರ. ಅವರು ಅಬಕಾರಿ ನೀತಿ ರೂಪಿಸುವ ಕಾರ್ಯದಲ್ಲಿ ನೇರವಾಗಿ ಭಾಗಿಯಾಗಿದ್ದರು. ಜತೆಗೆ, ಅವರು ಪಕ್ಷದ ಮುಖ್ಯಸ್ಥರು ಎಂದು ಇ.ಡಿ ಹೇಳಿದೆ.

ಇ.ಡಿ. ಪರ ವಾದ ಮಂಡಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಎಸ್‌.ವಿ.ರಾಜು, ‘2021–22ರ ದೆಹಲಿ ಅಬಕಾರಿ ನೀತಿ ರೂಪಿಸಲು ಹಾಗೂ ಅನುಷ್ಠಾನಗೊಳಿಸಲು ಕೇಜ್ರಿವಾಲ್ ಅವರು ‘ಸೌತ್‌ ಗ್ರೂಪ್’ನಿಂದ (ಬಂಧಿತ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಹಾಗೂ ಇತರ ಹಲವು ಮಂದಿಯನ್ನು ಒಳಗೊಂಡಿರುವ ಕಂಪನಿ) ಹಲವಾರು ಕೋಟಿ ಕಿಕ್‌ ಬ್ಯಾಕ್‌ ಪಡೆದಿದ್ದಾರೆ’ ಎಂದಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್‌ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ ಎಎಪಿ ಹಾಗೂ ವಿರೋಧ ಪಕ್ಷಗಳು, ‘ಇದೊಂದು ರಾಜಕೀಯ ಪ್ರೇರಿತ ಕ್ರಮ’ ಎಂದು ಆರೋಪಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT