ನವದೆಹಲಿ: ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಸಿಗುವ ಭರವಸೆಯಿದ್ದು, ಸುಪ್ರೀಂ ಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದೇವೆ’ ಎಂದು ಎಎಪಿ ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಹೇಳಿದರು.
ಕೇಜ್ರಿವಾಲ್ ಜಾಮೀನು ಅರ್ಜಿ ಕುರಿತ ಆದೇಶ ಕಾಯ್ದಿರಿಸಿರುವ ಸುಪ್ರಿಂ ಕೋರ್ಟ್, ನಾಳೆ(ಶುಕ್ರವಾರ) ತೀರ್ಪು ಪ್ರಕಟಿಸಲಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಛಡ್ಡಾ, ‘ತುಂಬಾ ಭರವಸೆ ಹೊಂದಿದ್ದು, ನಾಳೆಗಾಗಿ ನಾವು ಕಾಯುತ್ತಿದ್ದೇವೆ’ ಎಂದರು.
ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನ ಮಾಹಿತಿ ಪ್ರಕಾರ, ನಾಳಿನ ತೀರ್ಪನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಪ್ರಕಟಸಲಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಮತ್ತು ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ, ಸೆಪ್ಟಂಬರ್ 5ರಂದು ಆದೇಶ ಕಾಯ್ದಿರಿಸಿತ್ತು.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು.