ನವದೆಹಲಿ: ಎಎಪಿಯ ಶಾಸಕ ಮತ್ತು ರಾಷ್ಟ್ರ ರಾಜಧಾನಿಯ ಪ್ರಮುಖ ದಲಿತ ನಾಯಕ ರಾಜೇಂದ್ರ ಪಾಲ್ ಗೌತಮ್ ಅವರು ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಆಮ್ ಆದ್ಮಿ ಪಕ್ಷವು ಸಾಮಾಜಿಕ ನ್ಯಾಯ ಕಾರ್ಯಸೂಚಿಯನ್ನು ಅನುಸರಿಸುತ್ತಿಲ್ಲ ಎಂದು ಅವರು ಇದೇ ವೇಳೆ ವಾಗ್ದಾಳಿ ನಡೆಸಿದರು.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೌತಮ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮತ್ತು ದೆಹಲಿ ಘಟಕದ ಅಧ್ಯಕ್ಷ ದೇವೇಂದರ್ ಯಾದವ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಹೊತ್ತಿನಲ್ಲೇ ರಾಜೇಂದ್ರ ಕೈ ಪಾಳಯಕ್ಕೆ ಸೇರ್ಪಡೆಯಾಗಿದ್ದಾರೆ. ವಕೀಲರಾಗಿದ್ದ ಅವರು 2014ರಲ್ಲಿ ಎಎಪಿಗೆ ಸೇರ್ಪಡೆಗೊಂಡು, ಸೀಮಾಪುರಿ ವಿಧಾನಸಭಾ ಕ್ಷೇತ್ರದಿಂದ 2015 ಹಾಗೂ 2020ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.