ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಬಿಜೆಪಿ ನಾಯಕರೊಬ್ಬರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ರತನ್ ದುಬೆ ಅವರನ್ನು ಕೌಶಲನಗರ ಗ್ರಾಮದ ಮಾರುಕಟ್ಟೆಯಲ್ಲಿ ಹರಿತವಾದ ಆಯುಧದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆಗೆ ಸಂತಾಪ ಸೂಚಿಸಿರುವ ಬಿಜೆಪಿ ನಾಯಕ ಓಂ ಮಾಥುರ್, ‘ರತನ್ ದುಬೆ ಅವರನ್ನು ಪ್ರಚಾರದ ಸಮಯದಲ್ಲಿ ನಕ್ಸಲರು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಈ ಹೇಡಿತನದ ಘಟನೆಯನ್ನು ಇಡೀ ಪಕ್ಷ ಖಂಡಿಸುತ್ತದೆ‘ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಚುನಾವಣೆಗೆ ಮುನ್ನ ತನ್ನ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡಿದ ಸಂದರ್ಭದಲ್ಲೇ ಈ ಘಟನೆ ನಡೆದಿದೆ.
ನವೆಂಬರ್ 7 ರಂದು ಚುನಾವಣೆ ನಡೆಯಲಿರುವ 20 ವಿಧಾನಸಭಾ ಸ್ಥಾನಗಳಲ್ಲಿ ನಾರಾಯಣಪುರವೂ ಒಂದು. 90 ಸದಸ್ಯರ ವಿಧಾನಸಭೆಗೆ ಎರಡನೇ ಹಂತದ ಚುನಾವಣೆ ನವೆಂಬರ್ 17 ರಂದು ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.